ಶಿವಮೊಗ್ಗ, ಮೇ10 : ಅಮಾನೀಯವಾಗಿ ಸರಕು ಸಾಗಾಣಿಕೆ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಸಾಗಾಟ ಮಾಡುವುದು ಹಾಗೂ ಶಾಲಾ ಮಕ್ಕಳನ್ನು ನಿಯಮಬಾಹಿರವಾಗಿ ವಾಹನಗಳಲ್ಲಿ ತುಂಬಿಸಿಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಆನುಷ್ಟಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಅಧಿಕಾರಿಗಳಿಗೆ ಆದೇಶ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ಶಾಲಾ ಆಡಳಿತ ಮಂಡಳಿ, ಖಾಸಗಿ ಸಾರಿಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದರು.
ಕೈಗಾರಿಕಾ ಪ್ರದೇಶಗಳಲ್ಲಿ, ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಕೂಲಿ ಕಾರ್ಮಿಕರನ್ನು, ಕೃಷಿ ಚಟುವಟಿಕೆಗಳಿಗಾಗಿ ಕಾರ್ಮಿಕರನ್ನು ಸರಕು ಸಾಗಾಣಿಕಾ ವಾಹನಗಳಲ್ಲಿ ತುಂಬಿಸಿ ಸಾಗಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇದೇ ರೀತಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಅನಧಿಕೃತ ವಾಹನಗಳಲ್ಲಿ ಕರೆದುಕೊಂಡು ಹೋಗುವುದನ್ನು ಸಹ ನಿರ್ಬಂಧಿಸಲಾಗಿದೆ. ಇನ್ನು ಮುಂದೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿರುವ ವಾಹನಗಳಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಬಹುದಾಗಿದೆ. ಖಾಸಗಿ ವಾಹನಗಳಲ್ಲಿ ಸೀಟು ಸಾಮಥ್ರ್ಯಕ್ಕೆ ಅನುಗುಣವಾಗಿ ಮಾತ್ರ ವಿದ್ಯಾರ್ಥಿಗಳನ್ನು ಕರೆದು ಹೋಗಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.
ಈ ಹಿನ್ನೆಲೆಯಲ್ಲಿ ಮಾಚೇನಹಳ್ಳಿಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಪ್ರತಿ ನಿತ್ಯ 70ರಿಂದ 80 ಅನಧಿಕೃತ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಯಾವುದೇ ಕೈಗಾರಿಕಾ ಪ್ರದೇಶಗಳಲ್ಲಿ ಇಂತಹ ಸಾಗಾಟಕ್ಕೆ ಅವಕಾಶ ಮಾಡದೆ ಕಾನೂನು ಕ್ರಮಕೈಗೊಳ್ಳಬೇಕು. ಸದರಿ ಕಾರ್ಮಿಕರ ಪ್ರಯಾಣಕ್ಕಾಗಿ ಕೈಗಾರಿಕಾ ಸಂಸ್ಥೆಗಳು ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಶಾಲಾ ಕಾಲೇಜುಗಳು ಆರಂಭವಾಗುವ ಸಂದರ್ಭದಲ್ಲಿ ಪ್ರತಿ ಶಾಲೆಗಳಿಗೆ ವಿದ್ಯಾರ್ಥಿಗಳು ಯಾವ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕು. ಒಮ್ನಿ, ಅಟೋಗಳು ಸೇರಿದಂತೆ ನಿಯಮಬಾಹಿರವಾಗಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವ ವಾಹನಗಳ ಛಾಯಾಚಿತ್ರಗಳನ್ನು ತೆಗೆದು ಪ್ರಕರಣಗಳನ್ನು ದಾಖಲಿಸಬೇಕು.
ಶಾಲೆಗಳಿಗೆ ದೂರದಿಂದ ಬರುವ ಮಕ್ಕಳಿಗೆ ಕಡ್ಡಾಯವಾಗಿ ವಾಹನ ಸೌಲಭ್ಯವನ್ನು ಶಾಲಾ ಆಡಳಿತ ಮಂಡಳಿಯವರು ಒದಗಿಸಬೇಕು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಿಸಲಾಗುತ್ತಿದ್ದು, ಈ ಸೌಲಭ್ಯ ಪಡೆದುಕೊಳ್ಳಬೇಕು. ಶಾಲಾ ಮಕ್ಕಳ ಅನುಕೂಲಕ್ಕಾಗಿಯೇ ವಿಶೇಷ ರಿಯಾಯಿತಿ ದರದಲ್ಲಿ ಶಾಲೆಗಳಿಗೆ ಒಪ್ಪಂದದ ಮೇರೆಗೆ ಸಂಸ್ಥೆ ಬಸ್‍ಗಳನ್ನು ಒದಗಿಸುತ್ತಿದ್ದು, ಆರ್ಥಿಕವಾಗಿ ಸ್ವಂತ ವಾಹನ ಹೊಂದಲು ಸಾಧ್ಯವಿಲ್ಲದೇ ಇರುವ ಶಾಲೆಗಳು ಈ ಸೌಲಭ್ಯ ಪಡೆಯಬಹುದಾಗಿದೆ. ಯಾವುದೇ ಕಾರಣಕ್ಕೂ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಬರಲು ಅವಕಾಶ ನೀಡಬಾರದು. ಇಂತಹ ವಾಹನಗಳು ಅವಘಡಗಳು ಸಂಭವಿಸಿದ ಸಂದರ್ಭಗಳಲ್ಲಿ ಶಾಲಾ ಆಡಳಿತ ಮಂಡಳಿಯನ್ನು ನೇರವಾಗಿ ಹೊಣೆಯಾಗಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರ್ಯಾಯ ವ್ಯವಸ್ಥೆ: ಸರಕು ಸಾಗಾಣಿಕೆ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವ ಮಾರ್ಗಗಳ ಮಾಹಿತಿಯನ್ನು ನೀಡಿದರೆ ಅಂತಹ ಕಡೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ನಗರ ಸಾರಿಗೆ ಬಸ್‍ಗಳಿಗೆ ಒಳಮಾರ್ಗಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಸಂಚಾರ ವ್ಯಾಪ್ತಿಯನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುವುದು. ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಸಾಗಾಟಕ್ಕಾಗಿ ಮಾಡಬಹುದಾದ ಪರ್ಯಾಯ ಸಾರಿಗೆ ವ್ಯವಸ್ಥೆ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಅವರು ಕಾರ್ಮಿಕ ಇಲಾಖೆ ಹಾಗೂ ಆರ್‍ಟಿಒ ಅಧಿಕಾರಿಗಳಿಗೆ ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶೇಖರ್, ಸಾರಿಗೆ ಇಲಾಖೆ ಜಂಟಿ ಆಯುಕ್ತ ಶಿವರಾಜ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


error: Content is protected !!