ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮವನ್ನು ಜುಲೈ 1 ರಿಂದ 7ರವರೆಗೆ ಜಿಲ್ಲೆಯಾದ್ಯಂತ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಸಸಿ ನೆಡುವ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಇತ್ತೀಚಿನ ವರ್ಷಗಳಲ್ಲಿ ಹವಾಮಾನ ವೈಪರೀತ್ಯ ಗಳಿಂದಾಗಿ ವಾತಾವರಣದಲ್ಲಿ ತಾಪಮಾನ ಹೆಚ್ಚಾಗಿದೆ. ವಾಹನಗಳ ಸಂಖ್ಯೆಯ ಹೆಚ್ಚಳದಿಂದಾಗಿ ರಸ್ತೆಗಳು ವಾಹನ ದಟ್ಟಣೆಯಿಂದ ಕೂಡಿವೆ. ಅರಣ್ಯ ಪ್ರದೇಶಗಳು, ಮರಗಿಡಗಳ ಕ್ಷೀಣತೆಯು ಪರಿಸರ ಹಾಗೂ ಹವಾಮಾನದ ಮೇಲೆ ನೇರ ಪರಿಣಾಮ ಬೀರಿದ್ದು, ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಅದರ ನಿಯಂತ್ರಣಕ್ಕಾಗಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದು. ಕಾರ್ಯಕ್ರಮದ ಯಶಸ್ಸಿಗಾಗಿ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಾಷ್ಟ್ರೀಯ ಅರಣ್ಯ ನೀತಿಯ ಗುರಿಯನ್ನು ತಲುಪುವ ನಿಟ್ಟಿನಲ್ಲಿಯೂ ಈ ಕಾರ್ಯಕ್ರಮ ಸಹಕಾರಿಯಾಲಿದ್ದು, ಈ ಅವಧಿಯಲ್ಲಿ ಅರಣ್ಯ ಪ್ರದೇಶದಲ್ಲಿನ ಖಾಲಿ ಸ್ಥಳಗಳು, ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿಗಳು, ಶೈಕ್ಷಣಿಕ ಸಂಸ್ಥೆಯ ಆವರಣ, ಕೈಗಾರಿಕಾ ಪ್ರದೇಶಗಳ ಆವರಣ, ಧಾರ್ಮಿಕ ಸಂಘ-ಸಂಸ್ಥೆಗಳ ಆವರಣ, ವಿಶ್ವವಿದ್ಯಾಲಯಗಳ ಆವರಣ, ಸರ್ಕಾರಿ ಇಲಾಖೆಗಳ ಆವರಣ, ರೈತರ ಜಮೀನುಗಳ ಬದುಗಳು ಹಾಗೂ ಕೆರೆ ಅಂಗಳಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದವರು ನುಡಿದರು.
ಸಸಿಗಳನ್ನು ಆಯಾ ಪ್ರದೇಶದ ಗುಣಮಟ್ಟಕ್ಕೆ ಅನುಗುಣವಾಗಿ ವೈಜ್ಞಾನಿಕವಾಗಿ ನೆಡಲು ಹಾಗೂ ನೆಟ್ಟ ಗಿಡಗಳನ್ನು ಸ್ಥಳೀಯ ಸಂಘ-ಸಂಸ್ಥೆಗಳಿಗೆ, ಕೆಲವು ಇಲಾಖೆಗಳಿಗೆ ನಿರ್ವಹಣೆಗಾಗಿ ವಹಿಸಿಕೊಡುವ ಬಗ್ಗೆಯೂ ಯೋಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾರ್ಯಕ್ರಮ ಆಯೊಜನೆ, ಗಿಡನೆಡುವ ಹೊಣೆಗಾರಿಕೆ ನೀಡಲಾಯಿತು. ಕಾರ್ಯಕ್ರಮದ ಅನುಷ್ಠಾನದಲ್ಲಿ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಕಾರ್ಯಕ್ರಮದ ಅನುಷ್ಠಾನದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು, ಹಾಗೂ ಇತರ ಆಸಕ್ತ ಸರ್ಕಾರೇತರ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಉ.ಅ.ಸಂ. ಶಿವಶಂಕರ್, ಪ್ರೊಬೇಷನರ್ ಜಿಲ್ಲಾ ಅಧಿಕಾರಿ ದಲ್ ಜಿತ್ ಕುಮಾರ್, ಉಪವಿಭಾಗಾಧಿಕಾರಿ ರವಿಚಂದ್ರನಾಯ್ಕ್,, ಜಿಲ್ಲಾ ನಗರ ಯೋಜನಾ ನಿರ್ದೇಶಕ ಎಂ.ಕರಭೀಮಣ್ಣನವರ್ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.