ಶಿವಮೊಗ್ಗ, ಮೇ18 : ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅತಿಸಾರ ಬೇಧಿ ನಿಯಂತ್ರಣ ಕಾರ್ಯಕ್ರಮ ಕುರಿತು ಅಧಿಕಾರಿಗಳ ಸಭೆ ನಡೆಸಿದರು.
ಜಿಲ್ಲೆಯ ಹಲವು ಗ್ರಾಮ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇದುವರೆಗೆ 29ಹಳ್ಳಿಗಳಲ್ಲಿ 1180ಟ್ಯಾಂಕರ್ ನೀರು ಪೂರೈಕೆ ಮಾಡಲಾಗಿದೆ. ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿನ ಮೂಲವನ್ನು ಪರಿಶೀಲನೆ ಮಾಡಬೇಕು. ಅದೇ ರೀತಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಕಲುಷಿತ ಕುಡಿಯುವ ನೀರಿನಿಂದಾಗಿ ಅತಿಸಾರ ಬೇಧಿ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ. ಇತ್ತೀಚಿಗೆ ತೀರ್ಥಹಳ್ಳಿ ತಾಲೂಕಿನ ಪಡುವಳ್ಳಿಯಲ್ಲಿ ಕಾಣಿಸಿಕೊಂಡಿರುವ ಅತಿಸಾರ ಬೇಧಿಯನ್ನು ಅಪಾಯದ ಮುನ್ಸೂಚನೆಯಾಗಿ ಪರಿಗಣಿಸಿ ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಸ್ಥಳೀಯ ಗ್ರಾಮ ಪಂಚಾಯತ್‍ಗಳು ತಮ್ಮ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಮೂಲವನ್ನು ಪರಿಶೀಲಿಸಬೇಕು. ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಸಂಗ್ರಹಾಗಾರಗಳನ್ನು ಸಂಪೂರ್ಣ ಸ್ವಚ್ಛ ಮಾಡಿ ಸುಣ್ಣ ಬಳಿಯಬೇಕು. ನೀರಿಗೆ ಕೇವಲ ಕ್ಲೋರಿನ್ ಹಾಕಿದರೆ ಸಾಲದು. ಗುಣಮಟ್ಟದ ಕುಡಿಯುವ ನೀರು ಪೂರೈಕೆ ಪ್ರಕರಣಗಳಲ್ಲಿ ಸ್ಥಳೀಯ ಅಧಿಕಾರಿಗಳನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಗ್ರಾಮಗಳಲ್ಲಿ ಅತಿಸಾರ ಬೇಧಿ ಪ್ರಕರಣಗಳು ಗಮನಕ್ಕೆ ಬಂದ ತಕ್ಷಣ ಆಶಾ ಕಾರ್ಯಕರ್ತೆಯರು ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಪ್ರತಿಯೊಂದು ಅಂಗನವಾಡಿಗಳಲ್ಲಿ ಒಆರ್‍ಎಸ್ ಪ್ಯಾಕೇಟ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ 132ಡೆಂಗ್ಯು ಪ್ರಕರಣಗಳು ಹಾಗೂ 32ಇಲಿಜ್ವರ ಪ್ರಕರಣಗಳು ಕಂಡು ಬಂದಿವೆ. ಆರೋಗ್ಯ ಇಲಾಖೆ ಸ್ಥಳೀಯ ಆಡಳಿತ ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡು ಬೇಸಿಗೆಯಲ್ಲಿ ಬರುವ ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!