ಶಿವಮೊಗ್ಗ, ಜುಲೈ 23 : ಜಿಲ್ಲೆಯಲ್ಲಿ ವಿವಿಧ ಇಲಾಖೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಬಿಡುಗಡೆಯಾಗಿರುವ ಅನುದಾನ ವ್ಯಪಗತವಾಗದಂತೆ ಸಕಾಲದಲ್ಲಿ ಬಳಕೆ ಮಾಡಿ, ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಎಸ್.ಸೆಲ್ವಕುಮಾರ್ ಅವರು ಹೇಳಿದರು.
ಅವರು ಇಂದು ಜಿಲ್ಲಾ ಪಂಚಾಯತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಮುಂಗಾರು, ಪ್ರವಾಹ, ಇತರೆ ಅಭಿವೃದ್ಧಿ ಕಾವiಗಾರಿಗಳು ಹಾಗೂ ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೊಳಪಡುವ 24ಇಲಾಖೆಗಳ362.94ಲಕ್ಷ ಮೊತ್ತದ ಕಾಮಗಾರಿಗಳು, 2021-22ನೇ ಸಾಲಿನ ಮುಖ್ಯಮಂತ್ರಿ ಗ್ರಾಮೀಣ ಸಡಕ್ ಯೋಜನೆಯ 5.56ಕೋಟಿ ವೆಚ್ಚದ 79ಕಾಮಗಾರಿಗಳಿಗೆ, 2021-22ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆರೆ ಅಭಿವೃದ್ಧಿ ಯೋಜನೆಯಡಿ 55ಕೆರೆಗಳ ಅಭಿವೃದ್ಧಿಗಾಗಿ 3.57ಕೋಟಿ, ಜಿಲ್ಲಾ ಪಂಚಾಯಿತಿ ಶಾಸನಬದ್ಧ ಅನುದಾನದಡಿ 5.72ಕೋಟಿ ರೂ.ವೆಚ್ಚದ 127ಕಾಮಗಾರಿಗಳಿಗೆ ಅನುಮೋದನೆ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮಾಹೆಯಲ್ಲಿ ವಾಡಿಕೆಗಿಂತ ಶೇ.79ರಷ್ಟು ಹಾಗೂ ಕಳೆದ 24ಗಂಟೆಯಲ್ಲಿ 461ರಷ್ಟು ಮಳೆ ಹೆಚ್ಚಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಜನ-ಜಾನುವಾರು ಜೀವಹಾನಿಯಾಗಬಹುದಾಗಿದ್ದು, ಅದರ ಮಾಹಿತಿ ಸಂಗ್ರಹಿಸಿ ತಕ್ಷಣದಲ್ಲಿ ವರದಿ ನೀಡಲು ಆಯಾ ತಾಲೂಕುಗಳ ತಹಶೀಲ್ದಾರರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಇದರೊಂದಿಗೆ ಮನೆ ಬಿದ್ದಿರುವ, ಬೆಳೆ ಹಾನಿಗೊಳಗಾಗಿರುವ ಮಾಹಿತಿಯನ್ನು ಸಂಗ್ರಹಿಸಲು ಸೂಚಿಸಲಾಗಿದೆ ಎಂದರು.
ಶಿಕಾರಿಪುರದ ಕುಮುಧ್ವತಿ ನದಿ, ಸೊರಬದ ವರದಾ ನದಿ ಹಾಗೂ ತೀರ್ಥಹಳ್ಳಿಯ ನದಿಗಳು ತುಂಬಿ ಹರಿಯುತ್ತಿರುವ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಅಪಾಯದ ಅಂಚಿನಲ್ಲಿರುವ ಜನವಸತಿ ಪ್ರದೇಶಗಳ ಜನರಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ತಹಶೀಲ್ದಾರರಿಗೆ ಸೂಚಿಸಲಾಗಿದೆ. ಅಲ್ಲದೇ ಇಂದು ಸಂಜೆ ಎನ್.ಡಿ.ಆರ್.ಎಫ್ ತಂಡ ಜಿಲ್ಲೆಗೆ ಆಗಮಿಸುತ್ತಿದೆ ಎಂದವರು ಮಾಹಿತಿ ನೀಡಿದರು.
ಮುಂದಿನ ದಿನಗಳಲ್ಲಿ ಮಳೆ ಹೀಗೆಯೇ ಮುಂದುವರೆದರೆ ನಾಗರೀಕರ ರಕ್ಷಣೆಗಾಗಿ ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದ ಅವರು, ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದ ಅವರು, ಕೊರೋನ ಮೂರನೇ ಅಲೆಯ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸ್ಮಾರ್ಟ್‍ಸಿಟಿ, ಗ್ರಾಮೀಣ ರಸ್ತೆ, ಸಮಾಜ ಕಲ್ಯಾಣ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಕೆರೆ-ಕಟ್ಟೆ ಕಾಲುವೆಗಳ ಕುರಿತು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!