ಶಿವಮೊಗ್ಗ, ಫೆಬ್ರವರಿ 25 : ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿಯ ವೇತನ ಪರಿಷ್ಕರಣೆಗಾಗಿ ಅಧಿಕಾರಿಗಳ ವೇತನ ಸಮಿತಿ ರಚಿಸಲು ತಾತ್ವಿಕ ಒಪ್ಪಿಗೆ ಸೂಚಿಸಿ, ಪ್ರಸಕ್ತ ಆಯವ್ಯಯದಲ್ಲಿ ಪ್ರಸ್ತಾಪಿಸುವುದಾಗಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.
ಅವರು ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ 2022-23ನೇ ಸಾಲಿನ ಆಯವ್ಯಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡುತ್ತಿದ್ದರು. ಇತ್ತೀಚೆಗೆ ರಾಜಸ್ತಾನ ಸರ್ಕಾರವು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ. ಅದರಂತೆ ತಜ್ಞರಿಂದ ಅಧ್ಯಯನ ನಡೆಸಿ, ಯೋಜನೆಯ ಸಾಧಕ-ಬಾದಕಗಳನ್ನು ಅರಿತು ನೌಕರ ಸ್ನೇಹಿಯಾಗುವಂತೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.
ಕರ್ತವ್ಯನಿರತ ಸರ್ಕಾರಿ ಅಧಿಕಾರಿ, ನೌಕರರ ಮೇಲಿನ ಹಲ್ಲೆಗಳನ್ನು ನಿಯಂತ್ರಿಸಲು ಪ್ರಸ್ತುತ ಇರುವ ಕಾಯ್ದೆಗೆ ತಿದ್ದುಪಡಿ ತಂದು ಜಾಮೀನುರಹಿತ ಬಂಧನದಂತಹ ಕಠಿಣ ಕಾನೂನುಗಳನ್ನು ಜಾರಿಗೆ ತರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ನೌಕರರುಗಳ ತರಬೇತಿಗಾಗಿ 06 ಜಿಲ್ಲಾ ತರಬೇತಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅನುಭವಿ ವಿಷಯ ತಜ್ಞರನ್ನು ನೇಮಿಸುವ ಮೂಲಕ ಪುನಶ್ಚೇತನಗೊಳಿಸುವುದಾಗಿ ನೌಕರರ ನಿಯೋಗಕ್ಕೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಕೇಂದ್ರ ಮಾದರಿಯ ವೇತನ ಜಾರಿ ಹಾಗೂ ಎನ್.ಪಿ.ಎಸ್. ರದ್ದುಗೊಳಿಸುವ ಸಂಬಂಧ ಅಂಕಿ-ಅಂಶಗಳೊಂದಿಗೆ ಮುಖ್ಯಮಂತ್ರಿಗಳಿಗೆ ಹಾಗೂ ಉನ್ನತ ಮಟ್ಟದ ಅಧಿಕಾರಿಗಳಿಗೆ ಹಲವು ಅಗತ್ಯ ಬೇಡಿಕೆಗಳ ಪ್ರಸ್ತಾವನೆಯನ್ನು ಮಂಡಿಸಿದ್ದು, ಮಾನ್ಯ ಮುಖ್ಯಮಂತ್ರಿಗಳು ತಮ್ಮ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿರುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಐ.ಎಸ್.ಎನ್.ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಪಿ.ಸಿ.ಜಾಫರ್, ಸಿಬ್ಬಂಧಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಪಿ.ಹೇಮಲತಾ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!