ಶಿವಮೊಗ್ಗ, ಫೆಬ್ರವರಿ 25 : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕವು ಫೆಬ್ರವರಿ 26ರಂದು ಬೆಳಿಗ್ಗೆ 10ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ, ಶಿವಮೊಗ್ಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಾಗಾರವನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಉದ್ಘಾಟಿಸುವರು. ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಅವರು ಉಪಸ್ಥಿತರಿರುವರು. ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ ಅಧ್ಯಕ್ಷತೆ ವಹಿಸುವರು.
ಈ ಶೈಕ್ಷಣಿಕ ಕಾರ್ಯಾಗಾರದಲ್ಲಿ ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರು ಪ್ರಾಥಮಿಕ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣದ ಮಹತ್ವ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್, ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಆರಗಜ್ಞಾನೇಂದ್ರ, ಎಂ.ಎಸ್.ಐ.ಎಲ್. ಅಧ್ಯಕ್ಷ ಹರತಾಳು ಹಾಲಪ್ಪ, ವಿಧಾನ ಮಂಡಲದ ಅಧೀನ ಶಾಸನ ಸಮಿತಿ ಅಧ್ಯಕ್ಷ ಎಸ್.ಕುಮಾರ್ ಬಂಗಾರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.