ಶಿವಮೊಗ್ಗ, ಮಾರ್ಚ್ 23 : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿಯೂ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಪರೀಕ್ಷೆಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ|| ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ. ಮುಖ್ಯಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಒಟ್ಟು 94ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದವರು ನುಡಿದರು.
ಈ ಪರೀಕ್ಷೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ 90ಕೇಂದ್ರಗಳು ರೆಗ್ಯುಲರ್ ವಿದ್ಯಾರ್ಥಿಗಳಿಗಾಗಿ ಹಾಗೂ 04ಕೇಂದ್ರಗಳು ಖಾಸಗಿ ಪರೀಕ್ಷಾ ಕೇಂದ್ರಗಳಾಗಿರಲಿವೆ. ಎಂದ ಅವರು, ಈ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ತಲುಪಿಸಿ, ಉಸ್ತುವಾರಿ ನೋಡಿಕೊಳ್ಳಲು, ಪರೀಕ್ಷೆಗಳು ಸುಗಮವಾಗಿ ನಡೆಯಲು 35ಜನ ಮಾರ್ಗಾಧಿಕಾರಿಗಳು, 94ಜನ ಸ್ಥಾನಿಕ ಜಾಗೃತದಳದ ಅಧಿಕಾರಿಗಳು ಹಾಗೂ 94ಜನ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಿಸಲಾಗಿದೆ ಅಲ್ಲದೆ ಪೊಲೀಸ್ ಸಹಕಾರವನ್ನು ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕೋರಲಾಗಿದೆ ಎಂದವರು ನುಡಿದರು.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಜರ್, ಥರ್ಮಲ್ ಸ್ಕ್ಯಾನ್ ಮಾಡುವಂತೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂಧಿಗಳನ್ನು ನೇಮಕ ಮಾಡುವಂತೆ ಸೂಚಿಸಲಾಗಿದೆ ಎಂದ ಅವರು, ಸೋಂಕಿನ ಸಂಶಯಾಸ್ಪದ ಅಭ್ಯರ್ಥಿಗಳಿದ್ದಲ್ಲಿ ಅಂತಹವರಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವುದು, ಗುಂಪುಗೂಡುವುದನ್ನು ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿ, ಸಿಬ್ಬಂಧಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಕೇಂದ್ರ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲು ಸೂಚಿಸಲಾಗಿದೆ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆಯದಂತೆ ಸೂಚಿಸಲಾಗಿದೆ ಎಂದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿ ಮತ್ತು ಸಿಬ್ಬಂಧಿಗಳು ಸದಾ ಜಾಗೃತವಾಗಿದ್ದು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಪರೀಕ್ಷಾರ್ಥಿಗಳು ಹಾಗೂ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳೂ ಸಹ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು, ಸ್ಮಾರ್ಟ್‍ವಾಚ್‍ಗಳು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಖಜಾನಾಧಿಕಾರಿ ಶ್ರೀಮತಿ ಹೆಚ್.ಎಸ್.ಸಾವಿತ್ರಿ, ಆರ್.ಸಿ.ಹೆಚ್. ಡಾ||ನಾಗರಾಜ್‍ನಾಯ್ಕ್, ಶಿಕ್ಷಣಾಧಿಕಾರಿ ಶಂಕರಪ್ಪ ಸೇರಿದಂತೆ ನಿಯೋಜಿತ ಅಧಿಕಾರಿ – ಸಿಬ್ಬಂಧಿಗಳು ಉಪಸ್ಥಿತರಿದ್ದರು.

error: Content is protected !!