News Next

ಶಿವಮೊಗ್ಗ, ಜುಲೈ 20 : ರಾಜ್ಯದಲ್ಲಿ ಕೋವಿಡ್-19ರ ಕಾರಣದಿಂದ ದಿನಾಂಕ: 01-01-2020ರಿಂದ ತಡೆಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು 2021 ಜುಲೈ 01ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮತ್ತು ಸಂಘದ ಪದಾಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಅಖಿಲಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಭಾರತ ಸರ್ಕಾರವು ತನ್ನ ನೌಕರರಿಗೆ ಜುಲೈ 01ರಿಂದ ಅನ್ವಯವಾಗುವಂತೆ ಶೇ.11ರ ತುಟ್ಟಿಭತ್ಯೆ ಮಂಜೂರು ಮಾಡಿರುತ್ತದೆ. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಹ ಶೇ. 11ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಮಾನ್ಯ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.
ನೌಕರರ ಕೋರಿಕೆಯನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ತುಟ್ಟಿಭತ್ಯೆ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಆದೇಶ ಹೊರಡಿಸಿರುವ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಸರ್ಕಾರದ ಉನ್ನತ ಹಂತದ ಅಧಿಕಾರಿಗಳಿಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಸರ್ಕಾರದ ಈ ಆದೇಶದಿಂದ ರಾಜ್ಯದ ಆರು¯ಕ್ಷ ಸರ್ಕಾರಿ ನೌಕರರು, 4.50ಲಕ್ಷ ಪಿಂಚಣಿದಾರರು ಹಾಗೂ 3.00ಲಕ್ಷ ನಿಗಮ-ಮಂಡಳಿಗಳ ನೌಕರರು ಈ ಸೌಲಭ್ಯದ ಲಾಭ ಪಡೆಯಲಿದ್ದಾರೆ. ರಾಜ್ಯದ ಎಲ್ಲಾ ನೌಕರರಿಗೆ ದಿನಾಂಕ: 01-07-2021ರಿಂದ ಮಂಜೂರಾಗುವ ತುಟ್ಟಿಭತ್ಯೆಯು ಮೂಲ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ.
_ ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು, ಸರ್ಕಾರಿ ನೌಕರರ ಸಂಘ,

error: Content is protected !!