ಶಿವಮೊಗ್ಗ, ಮಾರ್ಚ್ 16 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಲಭ್ಯವಿರುವ ಸೀಟುಗಳಿಗೆ ಮಾರ್ಚ್ 20ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಒಟ್ಟು 14ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಪರೀಕ್ಷೆಗೆ ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ 4728ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅದಕ್ಕಾಗಿ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ಕೇಂದ್ರಕ್ಕೆ ತಲುಪಿಸಿ, ಹಿಂದಿರುಗಿಸಲು ಮಾರ್ಗಾಧಿಕಾರಿಗಳು, ಪರೀಕ್ಷಾ ಮೇಲ್ವಿಚಾರಕರ ತಂಡಗಳನ್ನು ನಿಯೋಜಿಸಲಾಗಿದೆ ಅಲ್ಲದೆ ಪೊಲೀಸ್ ಸಹಕಾರವನ್ನು ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕೋರಲಾಗಿದೆ ಎಂದವರು ನುಡಿದರು.
ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವುದು, ಗುಂಪುಗೂಡುವುದನ್ನು ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿ, ಸಿಬ್ಬಂಧಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಕೇಂದ್ರ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಲು ಸೂಚಿಸಲಾಗಿದೆ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆಯದಂತೆ ಸೂಚಿಸಲಾಗಿದೆ ಎಂದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿ ಮತ್ತು ಸಿಬ್ಬಂಧಿಗಳು ಸದಾ ಜಾಗೃತವಾಗಿದ್ದು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಪರೀಕ್ಷಾರ್ಥಿಗಳೂ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು, ಸ್ಮಾರ್ಟ್ವಾಚ್ಗಳು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಸಭೆಯ ನಂತರ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ ಅವರು ತರಬೇತಿ ನೀಡಿದರು. ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜ್ ಕಾಗಲ್ಕರ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ನಿಯೋಜಿತ ಅಧಿಕಾರಿ – ಸಿಬ್ಬಂಧಿಗಳು ಉಪಸ್ಥಿತರಿದ್ದರು.