ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಚುರುಕು ಮೂಡಿಸಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಮೆಸ್ಕಾಂ, ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಲೈನ್ ಮತ್ತು ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಬೇಕು ಎಂದು ತಿಳಿಸಿದರು.
ಯೋಜನೆ ಅಡಿ 132ಕಿಮಿ ಉದ್ದದ ಕುಡಿಯುವ ನೀರಿನ ಪೈಪ್‍ಲೈನ್ ಅಳವಡಿಸಲಾಗುತ್ತಿದ್ದು, ಈಗಾಗಲೇ 85ಕಿಮೀ ಕಾಮಗಾರಿ ಪೂರ್ಣಗೊಂಡಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಟಾನ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ ರಾಷ್ಟ್ರ ಮಟ್ಟದಲ್ಲಿ 25ನೇ ಸ್ಥಾನದಲ್ಲಿದೆ. ಡಿಸೆಂಬರ್ ಅಂತ್ಯದ ಒಳಗಾಗಿ ಈಗಾಗಲೇ ಕೈಗೆತ್ತಿಕೊಂಡಿರುವ 40ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ನಿಗದಿಯಂತೆ 2022ರ ಜೂನ್ ತಿಂಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ತಿಳಿಸಿದರು.
ಅಮೃತ್ ಯೋಜನೆಯಡಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ 15 ಮಳೆ ನೀರು ಚರಂಡಿ ಕಾಮಗಾರಿ ಮುಂದಿನ ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು. ನಗರ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಲಾಗಿರುವ ಉದ್ಯಾನವನಗಳ ನಿರ್ವಹಣೆಗಾಗಿ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವ ಕುರಿತು ಅನುಮೋದನೆಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೆಲ್ವಕುಮಾರ್ ಅವರು ತಿಳಿಸಿದರು.
94ಸಿ ಮತ್ತು 94ಸಿಸಿ ಅಡಿಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಅರ್ಜಿ ವಿಲೇವಾರಿ ಬಾಕಿ ಇಡಬಾರದು. ಇದೇ ರೀತಿ ಸಾಮಾಜಿಕ ಭದ್ರತಾ ಯೋಜನೆಯಡಿ ಸ್ವೀಕರಿಸಲಾದ ಅರ್ಜಿಗಳನ್ನು ಸಹ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಅವರು ಹೇಳಿದರು.
ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಘನತ್ಯಾಜ್ಯ ಘಟಕಗಳನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 116ಗ್ರಾಮ ಪಂಚಾಯತ್‍ಗಳಲ್ಲಿ ಘಟಕ ಸ್ಥಾಪನೆಗೆ ಭೂಮಿ ಗುರುತಿಸಲಾಗಿದೆ. 35ಗ್ರಾಮ ಪಂಚಾಯತ್‍ಗಳಿಗೆ ಈಗಾಗಲೇ ಘಟಕ ಸ್ಥಾಪನೆಗೆ 20ಲಕ್ಷ ರೂ. ಬಿಡುಗಡೆಯಾಗಿದೆ. ಇವುಗಳ ಪೈಕಿ 23ಗ್ರಾಮ ಪಂಚಾಯತ್‍ಗಳಲ್ಲಿ ಸಂಪೂರ್ಣ ಕಸವಿಲೇವಾರಿ ಪ್ರಕ್ರಿಯೆ ಆರಂಭವಾಗಿದೆ. ಮಾರ್ಚ್ ಕೊನೆಯ ಒಳಗಾಗಿ ಎಲ್ಲಾ 272ಗ್ರಾಮ ಪಂಚಾಯತ್‍ಗಳಲ್ಲಿ ಘನತ್ಯಾಜ್ಯ ಘಟಕ ಕಾರ್ಯಾರಂಭ ಮಾಡಲಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.