ಎಸ್‍ಎಸ್‍ಎಲ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಪರಿಶೀಲನೆ ನಡೆಸಿದರು. ಸಚಿವರು ನಗರದ ಕಸೂರ್ಬಾ ಬಾಲಕಿಯರ ಪ್ರೌಢಶಾಲೆ ಮತ್ತು ಮೈನ್ ಮಿಡ್ಲ್ ಸ್ಕೂಲ್‍ಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸಹಜವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯಲ್ಲಿ 24904 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 84 ಪರೀಕ್ಷಾ ಕೇಂದ್ರಗಳಿವೆ.
ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿವಿಧ ರೂಟ್‍ಗಳಲ್ಲಿ 198 ಬಸ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಹೊರತುಪಡಿಸಿ ಅನಿವಾರ್ಯ ಕಾರಣದಿಂದ ಬಸ್ ತಪ್ಪಿ ಹೋದರೆ ಅಂತಹ ವಿದ್ಯಾರ್ಥಿಗಳನ್ನು ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಕರೆ ತರಲು ಪ್ರತಿ ತಾಲೂಕಿನಲ್ಲಿ 5ಜೀಪ್‍ಗಳನ್ನು ಸಜ್ಜುಗೊಳಿಸಲಾಗಿದೆ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಊಟ ಉಪಾಹಾರದ ವ್ಯವಸ್ಥೆಯನ್ನು ಸಹ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.
ಮೇಯರ್ ಸುವರ್ಣಾ ಶಂಕರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಅವರು ಉಪಸ್ಥಿತರಿದ್ದರು.