ಲಾಕ್ ಡೌನ್ ಕಾರಣದಿಂದ ಉತ್ತರ ಭಾರತದ ಮಾರುಕಟ್ಟೆಗೆ ಕಳುಹಿಸಲು ಸಾಧ್ಯವಾಗದೇ ಸಂಕಷ್ಟ ಎದುರಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಅನಾನಸ್ ಬೆಳೆಗಾರರ ಸಮಸ್ಯೆ ಬಗೆಹರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಕೃಷಿಕ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 50ಸಾವಿರ ಟನ್ ಅನಾನಸ್ ಕಟಾವಿಗೆ ಬಂದಿದ್ದು, ದೆಹಲಿ ಮತ್ತು ಕೊಲ್ಕತ್ತಾ ಇದರ ಪ್ರಮುಖ ಮಾರುಕಟ್ಟೆಗಳಾಗಿವೆ. ಆದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಲ್ಲಿನ ಜ್ಯೂಸ್ ಫ್ಯಾಕ್ಟರಿಗಳು ಮುಚ್ಚಿರುವುದರಿಂದ ಸಮಸ್ಯೆ ಎದುರಾಗಿದೆ. ಈ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಹ ಚರ್ಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಅನಾನಸ್ ಬೆಳೆಗಾರರ ಸಮಸ್ಯೆ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಉತ್ತರ ಭಾರತದ ಜ್ಯೂಸ್ ಫ್ಯಾಕ್ಟರಿಗಳನ್ನು ತೆರೆಯಲು ಮನವಿ ಮಾಡುವುದು ಸೇರಿದಂತೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಅದೇ ರೀತಿಯಲ್ಲಿ ಶುಂಠಿ ಕ್ಯೂರಿಂಗ್ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರು ತಿಳಿಸಿದರು.

ಕೃಷಿ ಉತ್ಪನ್ನಗಳ ಸಾಗಾಟ ಸೇರಿದಂತೆ ಕೃಷಿ ಚಟುವಟಿಕೆಗಳ ಮೇಲೆ ಯಾವುದೆ ನಿರ್ಬಂಧವನ್ನು ವಿಧಿಸುವಂತಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಚೆಕ್‍ಪೋಸ್ಟ್‍ಗಳಲ್ಲಿ ಯಾವುದೇ ನಿರ್ಬಂಧ ವಿಧಿಸಬಾರದು. ಇದೇ ರೀತಿ ಪಂಪ್‍ಸೆಟ್‍ಗಳು, ಪೈಪ್‍ಗಳು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಬೇಕು. ಕೃಷಿ ಚಟುವಟಿಕೆ ವಾಹನಗಳಿಗೆ ಪೆಟ್ರೋಲ್, ಇಂಧನ ಪೂರೈಸಬೇಕು. ಎಪಿಎಂಸಿ ಮಾರುಕಟ್ಟೆಗಳನ್ನು ತೆರೆಯುವಂತೆ ನಿರ್ದೇಶನ ನೀಡಲಾಗಿದೆ. ಆದರೆ ಎಲ್ಲಾ ಕಡೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಕೃಷಿ ಚಟುವಟಿಕೆ ಆಧಾರಿತ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಸಾಮಾಗ್ರಿಗಳನ್ನು ರೈತರು ನೇರವಾಗಿ ಖರೀದಿ ಮಾಡಲು ಅವಕಾಶವಿಲ್ಲ. ವ್ಯಾಪಾರಿಗಳು ನೇರವಾಗಿ ರೈತರ ಮನೆ ಬಾಗಿಲಿಗೆ ತಲುಪಿಸಲು ಅನುಮತಿ ನೀಡಲಾಗಿದೆ. ಬೋರ್‍ವೆಲ್‍ಗಳನ್ನು ಕೊರೆಯಲು ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಎಂದಿನಂತೆ ಗ್ರಾಮೀಣ ಭಾಗದಲ್ಲಿ ಸಂಬಂಧಪಟ್ಟ ಪಿಡಿಒಗಳ ಅನುಮತಿಯೊಂದಿಗೆ ಬೋರ್‍ವೆಲ್ ಕೊರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟನೆ ನೀಡಿದರು.
ಮುಂಗಾರು ಬಿತ್ತನೆಗೆ ಈಗಲೇ ಅಗತ್ಯ ರಸಗೊಬ್ಬರ, ಬಿತ್ತನೆ ಬೀಜಗಳ ದಾಸ್ತಾನು ಆರಂಭಿಸುವಂತೆ ಸಚಿವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ಆಯನೂರು ಮಂಜುನಾಥ, ಹರತಾಳು ಹಾಲಪ್ಪ, ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಜ್ಯೋತಿ ಎಸ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!