ಕರೋನಾದ ಸಂಕಷ್ಟದ ಸಂದರ್ಭದಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ನೆರವು ಒದಗಿಸಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ತಿಳಿಸಿದರು.
ಅವರು ಬುಧವಾರ ದೇವಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕರೋನಾದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಆದರೂ ಸರ್ಕಾರ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ರೀತಿಯ ನೆರವು ಒದಗಿಸುತ್ತಿದೆ. ಕೈಗಾರಿಕೆಗಳಿಗೆ ಪೂರಕವಾಗಿ ಇತ್ತೀಚೆಗೆ ಕೆಲವು ತಿದ್ದುಪಡಿಗಳನ್ನು ಸಹ ಮಾಡಲಾಗಿದೆ. ಪ್ರಧಾನಮಂತ್ರಿ ಅವರು ಘೋಷಿಸಿರುವ 20ಲಕ್ಷ ಕೋಟಿ ರೂ. ಪ್ಯಾಕೇಜಿನಲ್ಲಿ 3ಲಕ್ಷ ಕೋಟಿ ರೂ. ಕೈಗಾರಿಕಾ ಕ್ಷೇತ್ರಕ್ಕೆ ಮೀಸಲಾಗಿರಿಸಲಾಗಿದ್ದು, ಇದರಿಂದ ಹೆಚ್ಚಿನ ನೆರವು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ದೇವಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಲಾಗುವುದು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಿದ್ದು, ಇದಕ್ಕೆ ಪೂರಕವಾಗಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ನೆರವು ಒದಗಿಸಲಾಗುವುದು. ಕೈಗಾರಿಕಾ ಬೆಳವಣಿಗೆಯಲ್ಲಿ ರಾಜ್ಯವನ್ನು ದೇಶಕ್ಕೆ ನಂಬರ್ ಒನ್ ಮಾಡುವುದು ನಮ್ಮ ಗುರಿ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಲು ಗರಿಷ್ಟ ಪ್ರಯತ್ನ ನಡೆಸಲಾಗುತ್ತಿದೆ. ಎಂಪಿಎಂ ಪುನರಾರಂಭಿಸುವ ಕುರಿತು ಸರ್ಕಾರ ಗಂಭೀರವಾದ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಹೇಳಿದರು.
ಶಾಸಕ ಅಶೋಕ ನಾಯ್ಕ್ ಅವರು ಮಾತನಾಡಿ, ದೇವಾತಿಕೊಪ್ಪ ಕೈಗಾರಿಕಾ ವಲಯದಲ್ಲಿ ಇನ್ನೂ ಮೂಲಸೌಲಭ್ಯಗಳನ್ನು ಸಂಪೂರ್ಣವಾಗಿ ಕಲ್ಪಿಸಿಲ್ಲ. ಈ ಹಿನ್ನೆಲೆಯಲ್ಲಿ ಬ್ಯಾಂಕ್‍ನಿಂದ ಸಾಲ ಸೌಲಭ್ಯ ಸಹ ದೊರೆಯತ್ತಿಲ್ಲ. ವಿದ್ಯುತ್, ನೀರು ಪೂರೈಕೆ ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಅರುಣ್, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗೌರವ ಗುಪ್ತಾ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ಮತ್ತಿತರರು ಉಪಸ್ಥಿತರಿದ್ದರು.
error: Content is protected !!