ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಕೂಲಿ ಕೆಲಸ ನೀಡಲು ಸಾಧ್ಯವಾಗಿದ್ದು, ಕೂಲಿ ಕೆಲಸ ಮಾಡಲು ಮುಂದೆ ಬರುವ ಪ್ರತಿಯೊಬ್ಬರಿಗೂ ತಕ್ಷಣ ಜಾಬ್ ಕಾರ್ಡ್ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಶನಿವಾರ ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಪ್ರಸ್ತುತ ಸರಾಸರಿ ಪ್ರತಿದಿನ 49ಸಾವಿರ ಮಂದಿ ಕೂಲಿ ಕೆಲಸದಲ್ಲಿ ತೊಡಗಿದ್ದು, ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸವನ್ನು ನಿಗದಿಪಡಿಸಲಾಗಿದೆ. ಅಂತರ್ಜಲ ಚೇತನ ಯೋಜನೆಯಡಿ 32836 ಕಾಮಗಾರಿಗಳನ್ನು ಗುರುತಿಸಲಾಗಿದ್ದು, ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮಾತ್ರವಲ್ಲದೆ ಕೂಲಿ ಕೆಲಸದವರಿಗೆ ಕುಡಿಯುವ ನೀರು ಇತ್ಯಾದಿ ಮೂಲಸೌಲಭ್ಯಗಳನ್ನು ಸಹ ಕಲ್ಪಿಸಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ಕಾಮಗಾರಿಗಳ ಪರಿಶೀಲನೆ: ಸಚಿವರು ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿರುವ ನೊಣಬೂರು ಗ್ರಾಮ ಪಂಚಾಯತ್‍ನ ಮಲ್ಲೇಸರ ಜೋಡು ಕೆರೆ ಹೂಳು ಮತ್ತು ದಂಡೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಇದೇ ರೀತಿ ಅರಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚೆಕ್‍ಬಂಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಧಿಕಾರಿಗಳೊಂದಿಗೆ ಸಭೆ: ಗ್ರಾಮೀಣ ಭಾಗದ ನಿರುದ್ಯೋಗಿ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕಲ್ಪಿಸಬೇಕು. ಇದರಿಂದ ಈ ಸಂಕಷ್ಟಮಯ ಸಂದರ್ಭದಲ್ಲಿ ಆರ್ಥಿಕ ಪುನಶ್ಚೇತನ ಹೊಂದಲು ಸಾಧ್ಯವಾಗಲಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಲಾಕ್‍ಡೌನ್ ಸಂದರ್ಭದಲ್ಲಿ ವಲಸೆ ಬಂದಿರುವವರು, ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಬಯಸಿ ಅರ್ಜಿ ಸಲ್ಲಿಸಿದರೆ ತಕ್ಷಣ ಜಾಬ್ ಕಾರ್ಡ್ ನೀಡಬೇಕು ಎಂದು ಸಚಿವರು ಬಳಿಕ ತೀರ್ಥಹಳ್ಳಿ ಸಭಾಂಗಣದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.
ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನದಲ್ಲಿ ಯಾವುದೇ ಕರ್ತವ್ಯ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಉದ್ಯೋಗ ಖಾತ್ರಿ ಕಾಮಗಾರಿಗಳ ಅನುಷ್ಟಾನದ ಮೇಲೆ ಸಮರ್ಪಕವಾಗಿ ನಿಗಾ ವಹಿಸಬೇಕು. ಯೋಜನೆಯ ಲಾಭ ಎಲ್ಲರಿಗೂ ದೊರೆಯುವುದರೊಂದಿಗೆ ಗ್ರಾಮದಲ್ಲಿ ಆಸ್ತಿ ಸೃಜನೆ ಕಾರ್ಯ ಆಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಶಾಸಕ ಅರಗ ಜ್ಞಾನೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.