ಶಿವಮೊಗ್ಗ, ಅಕ್ಟೋಬರ್-11 :ಕುಷ್ಠರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನವೆಂಬರ್ 11ರಿಂದ 28ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಆಯೋಜಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಂದೋಲನದ ಆಯೋಜನೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕುಷ್ಠರೋಗ ಪ್ರಕರಣ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು. ಆಂದೋಲನದ ಯಶಸ್ಸಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಗಳು ಸಹಕಾರ ನೀಡಬೇಕು ಎಂದು ಅವರು ಹೇಳಿದರು.
ಆರೋಗ್ಯ ಕಾರ್ಯಕರ್ತೆಯರು ಪ್ರತಿಯೊಂದು ಮನೆಗೆ ಭೇಟಿ ನೀಡಿರುವುದನ್ನು ಖಾತ್ರಿಪಡಿಸಬೇಕು. ಎಲ್ಲಾ ಮಾಹಿತಿಗಳನ್ನು ನಿಗದಿತ ನಮೂನೆಯಲ್ಲಿ ತುಂಬಿ ಜಿಲ್ಲೆಯಲ್ಲಿರುವ ಕುಷ್ಠರೋಗಿಗಳ ನಿಖರ ಮಾಹಿತಿಯನ್ನು ಪಡೆದರೆ ಮಾತ್ರ ಇದನ್ನು ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಮಾ ಬೇಗಂ ಅವರು ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಕುಷ್ಠರೋಗದ ಹೊಸ 53ಪ್ರಕರಣಗಳು ಪತ್ತೆಯಾಗಿವೆ. ನಾಲ್ಕು ಮಂದಿ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಂಡಿದೆ.
ಕುಷ್ಠರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುತ್ತದೆ. ದೇಹದ ಮೇಲೆ ಯಾವುದೇ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ. ಕೈ ಕಾಲುಗಳಲ್ಲಿ ಜೋಮು ಹಿಡಿದು ಸ್ಪರ್ಶ ಜ್ಞಾನವಿಲ್ಲದಿರುವುದು, ಮುಖ ಅಥವಾ ಕೈ ಕಾಲುಗಳಲ್ಲಿ ಎಣ್ಣೆ ಸವರಿದಂತೆ ಹೊಳಪು ಇರುವುದು ಮುಂತಾದ ಚಿಹ್ನೆಗಳು ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು. ಈ ರೋಗವನ್ನು ಬಹು ಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಪ್ರಾರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ನೀಡಿದರೆ ಅಂಗವಿಕಲತೆ ತಡೆಗಟ್ಟಬಹುದು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಉಚಿತವಾಗಿ ದೊರೆಯುತ್ತಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿನಹಳ್ಳಿ, ಡಾ.ನಾಗರಾಜ ನಾಯಕ್, ಡಾ.ಶಂಕರಪ್ಪ, ಡಾ.ಕಿರಣ್ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.