ಶಿವಮೊಗ್ಗ, ಆ.03 : ಶಿವಮೊಗ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕೆ.ಎಂ.ಶಾಂತರಾಜು ಅವರು ಶನಿವಾರ ಕರ್ತವ್ಯ ವಹಿಸಿಕೊಂಡರು.
ನಿರ್ಗಮಿತ ಪೊಲೀಸ್ ವರಿಷ್ಟಾಧಿಕಾರಿ ಡಾ.ಅಶ್ವಿನಿ ಅವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಂ.ಶಾಂತರಾಜು ಅವರು, ಜಿಲ್ಲೆಯಲ್ಲಿ ಈ ಹಿಂದೆ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದೇ ಪ್ರಥಮ ಬಾರಿಗೆ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕರ್ತವ್ಯ ವಹಿಸುತ್ತಿದ್ದೇನೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದು ಇಲಾಖೆಯ ಪ್ರಾಥಮಿಕ ಕರ್ತವ್ಯವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿದ್ದು, ಇದಕ್ಕೆ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಸಾರ್ವಜನಿಕರ ಸಹಕಾರ ಸಹ ಅಗತ್ಯವಿದೆ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ವಿಷಯದಲ್ಲಿ ಯಾವುದೇ ರಾಜಿ ಮಾಡಲಾಗುವುದಿಲ್ಲ. ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಸಮಸ್ಯೆಗಳನ್ನು ಅರಿತುಕೊಂಡು ಅದನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.
ಪೊಲೀಸ್ ಇಲಾಖೆಯನ್ನು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಇಲಾಖೆಯನ್ನು ಇನ್ನಷ್ಟು ಜನಸ್ನೇಹಿಗೊಳಿಸುವುದು ತನ್ನ ಆದ್ಯತೆಯಾಗಿದೆ. ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಗಮನ ಹರಿಸಲಾಗುವುದು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಎಚ್.ಟಿ.ಶೇಖರ್ ಉಪಸ್ಥಿತರಿದ್ದರು.


error: Content is protected !!