ಶಿವಮೊಗ್ಗ, ಜ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 8ರಂದು ಶಿವಮೊಗ್ಗ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸಮಾಲೋಚನೆ ನಡೆಸಿದರು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ಜಿಲ್ಲಾಧಿಕಾರಿ ಅವರಿಗೆ ತಕ್ಷಣ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 23ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಅನುಷ್ಟಾನಗೊಳಿಸಲಾಗಿದೆ. ವಿವೇಕ ಶಾಲೆ ಯೋಜನೆಯಡಿ 14 ಕಾಮಗಾರಿಗಳ ಶಂಕುಸ್ಥಾಪನೆ, ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ 10ಅಂಗನವಾಡಿಗಳ ಉದ್ಘಾಟನೆ ಹಾಗೂ ಇನ್ನೂ 11 ಅಂಗನವಾಡಿಗಳಿಗೆ ಶಂಕುಸ್ಥಾಪನೆ, ಈಗಾಗಲೇ ಪೂರ್ಣಗೊಂಡಿರುವ 300 ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ, ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗಿರುವ 24 ಸಮುದಾಯ ಭವನಗಳ ಉದ್ಘಾಟನೆ ಹಾಗೂ ಪ್ರಾದೇಶಿಕ ಲಸಿಕಾ ಕೇಂದ್ರಕ್ಕೆ ಶಂಕುಸ್ಥಾಪನೆ ಸೇರಿದಂತೆ ಎಲ್ಲಾ ಪ್ರಮುಖ ಕಾಮಗಾರಿಗಳ ವಿವರಗಳನ್ನು ಒದಗಿಸಬೇಕು ಎಂದು ಹೇಳಿದರು.

ಈಗಾಗಲೇ 300 ಆಶ್ರಯ ಮನೆಗಳು ಪೂರ್ಣಗೊಂಡಿದ್ದು, ಅದಕ್ಕೆ ನೀರು, ವಿದ್ಯುತ್ ಮತ್ತು ಒಳಚರಂಡಿ ಸಂಪರ್ಕಗಳನ್ನು ತಕ್ಷಣ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳಬೇಕು. ಎನ್‍ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಮುಖ್ಯ ಕಾರ್ಯನಿರ್ವಹಣಧಿಕಾರಿ ಪ್ರಕಾಶ್, ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


error: Content is protected !!