ಶಿವಮೊಗ್ಗ, ಮೇ.11 : ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ನಾಲ್ಕು ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ ಎಂದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೋನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.