ಶಿವಮೊಗ್ಗ, ಫೆ.28: ಸಫಾಯಿ ಕರ್ಮಚಾರಿಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಂಡು ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನೆ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಸಭೆ ಹಾಗೂ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶತಮಾನಗಳಿಂದ ದೇಶದ ಜನರ ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ಸಫಾಯಿ ಕರ್ಮಚಾರಿಗಳು ಮಹತ್ತರವಾದ ಪಾತ್ರವನ್ನು ವಹಿಸುತ್ತಿದ್ದಾರೆ. ಸರ್ಕಾರ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಕಲ್ಯಾಣ ಕಾರ್ಯಕ್ರಮಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಡೆಸುವ ಅಗತ್ಯವಿದೆ ಎಂದರು.
ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನವನ್ನು ನೀಡಲು ಈಗಾಗಲೇ ಆದೇಶಿಸಲಾಗಿದ್ದು, ಇದನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಸಫಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ, ಸ್ವಚ್ಛತಾ ಉಪಕರಣಗಳ ಪೂರೈಕೆ, ಕನಿಷ್ಟ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣಾ ಶಿಬಿರಗಳು, ನೇರ ಸಂಬಳ ಪಾವತಿ ಸೌಲಭ್ಯ ಇತ್ಯಾದಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಾಣಕ್ಕಾಗಿ ನಿವೇಶನ ಒದಗಿಸುವಿಕೆ, ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಬೇಕು ಎಂದು ಹೇಳಿದರು.
ಆರೋಗ್ಯ ತಪಾಸಣೆ: ಪೌರ ಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ತಜ್ಞ ವೈದ್ಯರು ಶಿಬಿರದಲ್ಲಿ ಹಾಜರಿದ್ದು, ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಕಾರ್ಯವನ್ನು ಕೈಗೊಂಡರು.
ಸನ್ಮಾನ: ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಮೇಗೌಡ, ಮಹಾನಗರ ಪಾಲಿಕೆ ಮೇಯರ್ ಲತಾ ಗಣೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ, ನಗರಾಭಿವೃದ್ಧಿ ಯೋಜನಾ ಕೋಶದ ನಿರ್ದೇಶಕ ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು.