ಶಿವಮೊಗ್ಗ,: ಶಿವಮೊಗ್ಗ ನಗರದಲ್ಲಿರುವ ಸುಮಾರು 96ಸರ್ಕಾರಿ ಶಾಲೆಗಳನ್ನು ಆಯಾ ಶಾಲೆಯ ಹಳೆಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ದಾನಿಗಳ ಆರ್ಥಿಕ ನೆರವಿನೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸರ್ಕಾರಿ ಶಾಲೆಗಳ ಉನ್ನತೀಕರಣ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದನ್ನರಿತು ನಗರದ ಎಲ್ಲಾ ಶಾಲೆಗಳ ದುರಸ್ತಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಿಯಾಯೋಜನೆಯನ್ನು ತಯಾರಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಕ್ರಿಯಾಯೋಜನೆಯನ್ನಾಧರಿಸಿ, ಶಾಲಾ ಆಡಳಿತ ಮಂಡಳಿ ವತಿಯಿಂದ ನೀಡಬಹುದಾದ ಭಾಗದ ಹಣವನ್ನು ಆಧರಿಸಿ, ಸರ್ಕಾರದ ಅನುದಾನವನ್ನು ಬಳಸಿಕೊಂಡು ಆದ್ಯತೆಯ ಮೇರೆಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದವರು ನುಡಿದರು.
ಇದರೊಂದಿಗೆ ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ಕ್ರಮ ಅಗತ್ಯವಾಗಿದೆ. ಮಕ್ಕಳು ಆರೋಗ್ಯವಾಗಿದ್ದಾಗ ಸಹಜವಾಗಿ ಭವಿಷ್ಯದಲ್ಲಿ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದವರು ನುಡಿದರು.
ಒಪ್ಪಿಗೆಯಿಂದಲೋ ಅಥವಾ ಒಪ್ಪಿಗೆ ಇಲ್ಲದೆಯೋ ಅಪ್ರಾಪ್ತ ಮಕ್ಕಳ ವಿವಾಹ ನಡೆಯುತ್ತಿರುವುದು ಅಕ್ಷಮ್ಯ. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಬಾಲ್ಯವಿವಾಹ ನಿಯಂತ್ರಣಕ್ಕೆ ಎಲ್ಲ ಶ್ರಮ ಅಗತ್ಯವಾಗಿದೆ ಎಂದ ಅವರು ಕಿತ್ತುತಿನ್ನುವ ಬಡತನ, ದಾರಿದ್ರ್ಯ, ಅನಕ್ಷರತೆ ಬಾಲಕಾರ್ಮಿಕ ವ್ಯವಸ್ಥೆ ಜೀವಂತವಾಗಿರುವುದಕ್ಕೆ ಕಾರಣವಾಗಿದೆ ಎಂದವರು ನುಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಡಾ.ಅನಿತಾ ಎನ್.ತೊರವಿ ಅವರು ಮಾತನಾಡಿ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಉಳಿವು, ವಿಕಾಸದ ಪ್ರಯತ್ನವಾಗಿ ಆಯೋಗ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಇದಕ್ಕೆ ಆಯಾ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಹಳೆಯ ವಿದ್ಯಾರ್ಥಿಗಳ ಸಹಕಾರವನ್ನು ಪಡೆಯಲಾಗುವುದು. ಈಗಾಗಲೇ ರಾಜ್ಯದಲ್ಲಿ ಸುಮಾರು 70,000ಹಳೆ ವಿದ್ಯಾರ್ಥಿಗಳ ಸಂಘಗಳು ಸಕ್ರಿಯವಾಗಿವೆ. ಪ್ರಸ್ತುತ ಸುಮಾರು 15,000ಶಾಲೆಗಳು ಹಳೆ ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳ ಸಹಕಾರದಿಂದಲೇ ವಿಕಾಸಪಥದಲ್ಲಿ ಸಾಗಿವೆ ಎಂದರು.
ಅನೇಕ ಕಠಿಣ ಕಾಯ್ದೆಗಳು ಜಾರಿಯಲ್ಲಿದ್ದರೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬಾಲ್ಯವಿವಾಹ ಪ್ರಕರಣಗಳು ಅಲ್ಲಲ್ಲಿ ಕಂಡುಬರುತ್ತಿವೆ. ಬಾಲ್ಯವಿವಾಹದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ‘ಸಂದಿಗ್ಧ’ ಎಂಬ ಚಲಚನಚಿತ್ರ ಪ್ರದರ್ಶಿಸುವ ಮೂಲಕ ಜಾಗೃತಿಗೊಳಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪಾಸಿಂಗ್ ಪ್ಯಾಕೇಜ್ ಎಂಬ ಮಾಹಿತಿ ಹೊತ್ತಿಗೆಯನ್ನು ಕೆ.ಎಸ್.ಈಶ್ವರಪ್ಪ ಅವರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಶಿವರಾಮೇಗೌಡ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಸುಮಂಗಳಾ ಪಿ.ಕುಚಿನಾಡ, ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕಿ ಶೇಷಪ್ಪ, ಚಿತ್ರ ನಿರ್ಮಾಪಕ – ನಿರ್ದೇಶಕ ಸುಚೇಂದ್ರಪ್ರಸಾದ್, ಮಹೇಶ್ ದೇವು ಜಿ.ಜಿ.ಸುರೇಶ್, ಲೋಕೇಶ್ವರಪ್ಪ, ಹೆಚ್.ಆರ್.ಕೃಷ್ಣಮೂರ್ತಿ, ಸಿದ್ಧಬಸಪ್ಪ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ತಾಲೂಕಿನ ಉತ್ತಮ ಶಾಲೆಗಳಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.