ಶಿವಮೊಗ್ಗ: ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಆರ್ಥಿಕವಾಗಿ ಸದೃಢರಾಗಲು ಸಂಪೂರ್ಣ ಪ್ರಯತ್ನಿಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗ ನಗರದ ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ಆವರಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸೆ ಹಾಗೂ ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರು ಅಡುಗೆ ಮನೆ ಗೆ ಸೀಮಿತರಾಗದೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ತಂತ್ರಜ್ಞಾನದ ನೆರವಿನ ಜತೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅವಕಾಶವಿರುವ ಉದ್ಯೋಗಗಳನ್ನು ಆರಂಭಿಸಿ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ತಿಳಿಸಿದರು.
ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಸರ್ಕಾರಗಳು ಮಹಿಳೆಯರಿಗೆ ಪ್ರೋತ್ಸಾಹಿಸುವ ದೃಷ್ಠಿಯಿಂದ ವಿವಿಧ ಆರ್ಥಿಕ ಯೋಜನೆಗಳ ಅನುಷ್ಠಾನ ಮಾಡುತ್ತಿದ್ದು, ಸೂಕ್ತ ಮಾರ್ಗದರ್ಶನ ತೆಗೆದುಕೊಂಡು ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವ ರೋಟರಿ ಸಂಸ್ಥೆಗಳ ಕಾರ್ಯ ಅಭಿನಂದನೀಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಫಲಾನುಭವಿಗಳು ಅನಿಸಿಕೆಗಳನ್ನು ಹಂಚಿಕೊಂಡರು.
ಸಮುದಾಯ ಸೇವೆಗಳ ನಿರ್ದೇಶಕ ಎಸ್.ಗಣೇಶ್, ಕಾರ್ಯದರ್ಶಿ ಕುಮಾರಸ್ವಾಮಿ, ಜಿ.ವಿಜಯ್‌ಕುಮಾರ್, ಸಾಯಿಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕಿ ಶಶಿಕಲಾ, ವನಜಾಕ್ಷಿ, ರತ್ನಮ್ಮ ಹಾಗೂ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!