ಶಿವಮೊಗ್ಗ, ಅ.3 :ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ದೇಶಾದ್ಯಂತ ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ. ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕು. ಈ ಅಭಿಯಾನದಲ್ಲಿ ಸಾರ್ವಜನಿಕರು ಕೈಮಗ್ಗ ಅಥವಾ ವಿದ್ಯುತ್ ಮಗ್ಗದಿಂದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ರೇμÉ್ಮ, ಅಥವಾ ಖಾದಿಯಲ್ಲಿ ತಯಾರಿಸಿರುವ ರಾಷ್ಟ್ರ ಧ್ವಜವನ್ನು ಬಳಸಬಹುದಾಗಿದೆ ಎಂದು ಅವರು ಹೇಳಿದರು.

ಅಭಿಯಾನವನ್ನು ಯಶಸ್ವಿಗೊಳಿಸಲು ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ರಾಷ್ಟ್ರಧ್ವಜ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ್‍ಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಷ್ಟ್ರಧ್ವಜ ಪೂರೈಕೆ ಮಾಡಲಾಗಿದೆ. ಧ್ವಜ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಅಭಿಯಾನದಲ್ಲಿ ಭಾಗವಹಿಸಿ, ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು. ಆದರೆ ರಾಷ್ಟ್ರಧ್ವಜಕ್ಕೆ ಯಾವುದೇ ರೀತಿಯಲ್ಲಿ ಅಗೌರವವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಸಂಭ್ರಮದ ಆಚರಣೆ: ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಚ್ಚಿನ ಸಂಭ್ರಮದಿಂದ ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಿಗ್ಗೆ 9ಗಂಟೆಗೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು. ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಸೂಕ್ತ ಶಾಮಿಯಾನ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ವೃತ್ತಗಳಲ್ಲಿ, ಎಲ್ಲಾ ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು. ಸಾರ್ವಜನಿಕರು ಸಹ ಸ್ವಯಂಪ್ರೇರಣೆಯಿಂದ ತಮ್ಮ ಕಟ್ಟಡಗಳಿಗೆ ದೀಪಾಲಂಕಾರ ಮಾಡಬೇಕು. ಸಂಜೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಂದು ಅವರು ಮನವಿ ಮಾಡಿದರು.

ತಾಲೂಕುಗಳಲ್ಲಿಯೂ ಸಹ ಆಯಾ ತಹಶೀಲ್ದಾರರು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ತಾಲೂಕಾಡಳಿತ ವತಿಯಿಂದ ಮಾರ್ಗಸೂಚಿಗಳನ್ವಯ ಅರ್ಥಪೂರ್ಣವಾಗಿ ಆಯೋಜಿಸುವಂತೆ ಅವರು ಸೂಚಿಸಿದರು.

ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

error: Content is protected !!