ಶಿವಮೊಗ್ಗ, ಮಾರ್ಚ್ 11 : ಬೆಂಗಳೂರಿನ ಕೇಂದ್ರೀಯ ದಾಖಲಾತಿ ಘಟಕವು ಮಾರ್ಚ್ 29ರಂದು ಪ್ರಸಕ್ತ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಗರದ ಸುಮಾರು 20ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಂದು ಬೆಳಿಗ್ಗೆ 9.30ರಿಂದ 12ಗಂಟೆಯವರೆಗೆ ನಡೆಯಲಿರುವ ಮೊದಲ ಅಧಿವೇಶನದಲ್ಲಿ 08ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 2065ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ 20ಪರೀಕ್ಷಾ ಕೇಂದ್ರಗಳಲ್ಲಿ 5385ಅಭ್ಯರ್ಥಿಗಳು ಸೇರಿದಂತೆ ಒಟ್ಟು 5500ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದವರು ನುಡಿದರು.
ನಡೆಯುವ ಪರೀಕ್ಷೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ರಕ್ಷಣಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಂತೆಯೇ 20ಕೇಂದ್ರಗಳಿಗೆ ಕೇಂದ್ರ ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಇವರೊಂದಿಗೆ ರಾಜ್ಯ ಕಚೇರಿಯಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅಲ್ಲದೇ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿ, ಉತ್ತರ ಪತ್ರಿಕೆಗಳನ್ನು ಖಜಾನೆಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಮೇಲ್ವಿಚಾರಕರಾಗಿ ನಿಯೋಜಿಸುವ ಅಧಿಕಾರಿ-ಸಿಬ್ಬಂಧಿಗಳಿಗೆ ಅಲ್ಪಾವಧಿಯ ತರಬೇತಿ ನೀಡಿ, ಕೇಂದ್ರದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದ ಅವರು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಝೆರಾಕ್ಸ್ ಮತ್ತು ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುವುದಾಗಿ ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಶೇಖರಪ್ಪ ತೆಕ್ಕಣ್ಣನವರ್, ಜಯಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಂ.ರಮೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!