ಶಿವಮೊಗ್ಗ, ಮಾರ್ಚ್-15: ಕರೋನ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಭಾನುವಾರ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ಪ್ರಕರಣಗಳು ವರದಿಯಾಗಿಲ್ಲ. ಮೂರು ಶಂಕಿತ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿವೆ. ಜಿಲ್ಲೆಯಲ್ಲಿ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಮ್ಸ್‍ನಲ್ಲಿ 30 ಹಾಸಿಗೆಯ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದ್ದು, ವೈದ್ಯಾಧಿಕಾರಿಗಳ ತಂಡ ದಿನದ 24ಗಂಟೆ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು.

ಕರೋನಾ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರು ಒಂದು ಕಡೆ ಸೇರುವಂತಹ ಎಲ್ಲಾ ಕಾರ್ಯಕ್ರಮಗಳನ್ನು ಕೈಬಿಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಮುಂದಿನ 15ದಿನಗಳ ಕಾಲ ಯಾವುದೇ ಜಾತ್ರೆಗಳನ್ನು ನಡೆಸದಂತೆ ತಿಳಿಸಲಾಗಿದ್ದು, ಈ ಕುರಿತು ಸಂಬಂಧಪಟ್ಟವರಿಗೆ ಸೂಕ್ತ ಮಾಹಿತಿಯನ್ನು ನೀಡಬೇಕು. ದೊಡ್ಡ ಪ್ರಮಾಣದ ಯಾವುದೇ ಸಭೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಅಧಿಕಾರಿಗಳ ಸಭೆ: ಸಚಿವರು ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಕರೋನಾ ವೈರಸ್ ತಪಾಸಣೆಗೆ ಈಗಾಗಲೇ ಶಿಮ್ಸ್‍ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಇದಕ್ಕೆ ಹೊರತು ಪಡಿಸಿ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಪರ್ಯಾಯವಾಗಿ 300-400ಬೆಡ್‍ಗಳ ಐಸೋಲೇಶನ್ ವಾರ್ಡ್‍ಗಾಗಿ ವ್ಯವಸ್ಥೆ ಮಾಡಲಾಗಿದೆ. ವಿದೇಶಗಳಿಂದ ಆಗಮಿಸುವವರ ವಿವರಗಳನ್ನು ಎಲ್ಲಾ ಮೂಲಗಳಿಂದ ಪಡೆದು ಆರೋಗ್ಯ ಇಲಾಖೆಗೆ ನೀಡಲಾಗುತ್ತಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗಳು ವಿದೇಶದಿಂದ ಆಗಮಿಸಿದವರ ಆರೋಗ್ಯ ತಪಾಸಣೆ ಸೇರಿದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾಹಿತಿ ನೀಡಿದರು.

ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸಹ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿಯಾಗಿ ಒಂದು ಸಾವಿರ ಮಾಸ್ಕ್ ಆರ್ಡರ್ ಮಾಡಲಾಗಿದ್ದು, ನಾಳೆಯೊಳಗಾಗಿ ತಲುಪಲಿದೆ. ಕರೋನಾ ವೈರಸ್ ನಿರ್ವಹಣೆಗೆ 100ಕಿಟ್‍ಗಳನ್ನು ತರಿಸಲಾಗಿದೆ. ಶಿಮ್ಸ್‍ನಲ್ಲಿರುವ ಪ್ರಯೋಗಾಲಯದಲ್ಲಿ ಇದುವರೆಗೆ 15 ಪ್ರಕರಣಗಳ ಪರೀಕ್ಷೆ ನಡೆಸಲಾಗಿದ್ದು, ಎಲ್ಲವೂ ನೆಗೆಟಿವ್ ಬಂದಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್, ಶಿಮ್ಸ್ ನಿರ್ದೇಶಕ ಡಾ.ಲೇಪಾಕ್ಷಿ, ಡಾ.ಶಂಕರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!