ಶಿವಮೊಗ್ಗ, ಮಾರ್ಚ್ 28 : ಕರೋನಾ ವೈರಸ್ ಜಿಲ್ಲೆಗೆ ಕಾಲಿರಿಸದಂತೆ ತಡೆಯಲು ಜಿಲ್ಲಾಡಳಿತ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮನವಿ ಮಾಡಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಕರೋನಾ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಮಾಲೋಚಿಸಲು ಕರೆಯಲಾಗಿದ್ದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಲಭ್ಯತೆ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ತರಕಾರಿ, ದಿನಸಿ ಇತ್ಯಾದಿ ಸಾಗಾಟಕ್ಕೆ ಸುಗಮ ವ್ಯವಸ್ಥೆ ಮಾಡುವ ಮೂಲಕ ಅಗತ್ಯ ಸೇವೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಇಡೀ ನಗರಕ್ಕೆ ಕ್ರಿಮಿನಾಶಕ ಸಿಂಪಡಿಕೆಯನ್ನು ನಿಗದಿತವಾಗಿ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.
ಖಾಸಗಿ ವೈದ್ಯರು ಎಲ್ಲಾ ಸಹಕಾರವನ್ನು ನೀಡುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸಲಾಗುತ್ತಿದ್ದು, ಸಾರ್ವಜನಿಕರು ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಯಾವುದೇ ಗ್ರಾಮಸ್ಥರು, ತಮ್ಮ ಗ್ರಾಮಗಳಿಗೆ ಬೇರೆ ಜನರು ಪ್ರವೇಶಿಸದಂತೆ ರಸ್ತೆ ತಡೆ ನಡೆಸಲು ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಅಧಿಕಾರಿಗಳಿಗೆ ಸೂಚನೆ: ರೈತರು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಮಾರಾಟಕ್ಕೆ ಸಾಗಾಟ ಮಾಡಲು ಯಾವುದೇ ನಿರ್ಬಂಧ ವಿಧಿಸಬಾರದು. ಹಳ್ಳಿಗಳಲ್ಲಿ ಮದ್ಯ ಮಾರಾಟ ಆಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು. ಪ್ರತಿ ತಾಲೂಕಿನಲ್ಲಿ ಕಂಟ್ರೋಲ್ ರೂಂ ಆರಂಭಿಸಬೇಕು. ನೆರೆಯ ಜಿಲ್ಲೆಯಲ್ಲಿ ಹಕ್ಕಿಜ್ವರ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಲ್ಲಿ ಕೋಳಿ ಹಾಗೂ ಮೊಟ್ಟೆ ಮಾರಾಟ ನಿರ್ಬಂಧಿಸಿರುವುದರ ಬಗ್ಗೆ ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಬೇಕು. ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಲೋಕಸಭಾ ಸದಸ್ಯ ಬಿ.ಆರ್.ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ನಗರದಲ್ಲಿ ತಾಂತ್ರಿಕ ಕಾರಣದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಆದಷ್ಟು ಬೇಗನೆ ಅದನ್ನು ಸರಿಪಡಿಸುವಂತೆ ಕೆಪಿಟಿಸಿಎಲ್ ಮ್ಯಾನೇಜಿಂಗ್ ಡೈರೆಕ್ಟರ್ ಅವರಿಗೆ ಸೂಚನೆ ನೀಡಲಾಗಿದೆ. ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಆದಷ್ಟು ಬೇಗನೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಶಾಸಕರಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಅಶೋಕ ನಾಯ್ಕ, ಆಯನೂರು ಮಂಜುನಾಥ, ಆರ್. ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಮತ್ತಿತರ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ತಿತರಿದ್ದರು.
ಸಚಿವರಿಂದ ನಗರ ಸಂಚಾರ: ಅಧಿಕಾರಿಗಳ ಸಭೆಗೆ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿ ಬಜಾರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ರಸ್ತೆ ಬದಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ವ್ಯಾಪಾರ ನಡೆಸದಂತೆ ತಿಳಿ ಹೇಳಿದರು. ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ, ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.