ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ದಿನಗಳ ಸೃಷ್ಟಿಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಶನಿವಾರ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡು ಮಾತನಾಡಿದರು.
ಕಳೆದ ಸಾಲಿನಲ್ಲಿ ಕರ್ನಾಟಕದಲ್ಲಿ 7.65 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಮಾನವ ದಿನಗಳ ಸೃಷ್ಟಿಯಲ್ಲಿ ಮೊದಲನೇ ಸ್ಥಾನ ಗಳಿಸುವತ್ತ ನಾವು ಪ್ರಯತ್ನ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ನೀಡಲು ಬಾಕಿ ಇರಿಸಿದ್ದ 1816 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದರೊಂದಿಗೆ ಮುಂಗಡವಾಗಿ ಒಂದು ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಈ ಕುರಿತು ಸಚಿವರು ಧನ್ಯವಾದ ಸಲ್ಲಿಸಿದರು.
ರಾಜ್ಯದಲ್ಲಿ ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಯ್ದ 9 ಜಿಲ್ಲೆಗಳಲ್ಲಿ ಜಲ ಚೇತನ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಮಹತ್ವಾಕಾಂಕ್ಷೆಯ ಈ ಯೋಜನೆ ಜಾರಿಗೆ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಮೇ 1ರಿಂದ ಚಾಲನೆಗೊಳಿಸಲು ನಿರ್ಧರಿಸಲಾಗಿದೆ. ಗ್ರಾಮೀಣ ಭಾಗದ ಜನರ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಜಮ್ಮು ಕಾಶ್ಮೀರ, ರಾಜಸ್ತಾನ್, ಗುಜರಾತ್, ಕೇರಳ, ತಮಿಳುನಾಡು, ಅಸ್ಸಾಮ್ ಸೇರಿದಂತೆ ಒಟ್ಟು 9 ರಾಜ್ಯದಗಳ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.