ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮಾಧ್ಯಮ ಘಟಕವಾದ ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ವತಿಯಿಂದ ಸಾಗರ ತಾಲ್ಲೂಕಿನ ಆವಿನಹಳ್ಳಿ ಪ್ರೌಢ ಶಾಲೆಯಲ್ಲಿ ‘ಸ್ವಚ್ಛ ಭಾರತ ಅಭಿಯಾನ’ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ಜಾಗೃತಿ ಕಾರ್ಯಕ್ರಮ ಇಂದು ನಡೆಯಿತು.
ಸ್ವಚ್ಛ ಸರ್ವೇಕ್ಷಣ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶ್ರೀ. ಮಹದೇವಸ್ವಾಮಿ ಹಾಗೂ ಆವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಶ್ರೀ. ಕಾಂತರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶ್ರೀ. ಮಹದೇವ ಸ್ವಾಮಿ, ಯುವಜನಾಂಗದಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿ ಎಂದರು.
ಗ್ರಾಮೀಣ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸೂಕ್ತವಾಗಿ ಮಾಡಿದಲ್ಲಿ ಸ್ವಚ್ಛ ಭಾರತದ ಕನಸು ನನಸಾಗಲಿದೆ ಎಂದು ಅವರು ಹೇಳಿದರು.
ಆವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಶ್ರೀ. ಕಾಂತರಾಜ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರ ಕೈಗೊಳ್ಳಲಾಗುತ್ತಿದೆ ಎಂದರು.
ಕ್ಷೇತ್ರ ಜನಸಂಪರ್ಕ ಅಧಿಕಾರಿ ಶ್ರೀಮತಿ. ಅಕ್ಷತಾ ಸಿ. ಹೆಚ್ ಮಾತನಾಡಿ , ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಜನಜಾಗೃತಿಯನ್ನು ಮೂಡಿಸಿ ಯೋಜನೆಯ ಅನುಷ್ಠಾನದಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸುವುದು ಇಲಾಖೆಯ ಗುರಿ ಎಂದರು.
ಆವಿನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ. ಸಫಿಯಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ. ಜಯಮಾಲಾ. ಎಲ್, ಕಾರ್ಯದರ್ಶಿ ಶ್ರೀ. ಶೇಖರಪ್ಪ, ಆವಿನಹಳ್ಳಿ ಪ್ರೌಢ ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ. ಬಸವರಾಜ್ ಎನ್.ಡಿ , ಮುಖ್ಯ ಶಿಕ್ಷಕ ಶ್ರೀ. ಪರಶುರಾಮಪ್ಪ.ಬಿ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಸಂಗೀತ ಮತ್ತು ನಾಟಕ ವಿಭಾಗದ ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ತ್ಯಾಜ್ಯ ನಿರ್ವಹಣೆ ಪ್ರಾತ್ಯಕ್ಷಿಕೆ ಮತ್ತು ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಯಿತು.