ಶಿವಮೊಗ್ಗ, ಮೇ.16 : ಶಿವಮೊಗ್ಗ ನಗರದ ಸರ್ಕಾರಿ ನೌಕರರ ಭವನದ ಪಕ್ಕದಲ್ಲಿರುವ ಉದ್ಯಾನವನದಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸಹಯೋಗದಲ್ಲಿ ಆಕರ್ಷಕ `ಯುದ್ಧ ಸ್ಮಾರಕ ಶಿಲ್ಪ’ಗಳನ್ನು ರಚಿಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಸೈನಿಕ ಮಂಡಳಿ ಸಭೆಯಲ್ಲಿ ಈ ಕುರಿತು ಅವರು ಸಮಾಲೋಚನೆ ನಡೆಸಿದರು.
ದೇಶದ ರಕ್ಷಣೆಯಲ್ಲಿ ತೊಡಗಿರುವ ಸೈನಿಕರ, ಯುದ್ಧ ಸನ್ನಿವೇಶಗಳ ಶಿಲ್ಪಗಳು, ಜನರಲ್ ಕಾರ್ಯಪ್ಪ ಅವರ ಶಿಲ್ಪ ಪ್ರತಿರೂಪ ಸೇರಿದಂತೆ ಆಕರ್ಷಕವಾದ ಕಲಾಕೃತಿಗಳನ್ನು ರಚಿಸಬಹುದಾಗಿದೆ. ಈ ಕುರಿತು ಪ್ರಸ್ತಾವನೆಯನ್ನು ಸಿದ್ಧಪಡಿಸಿ, ಶಿಲ್ಪಕಲಾ ಅಕಾಡೆಮಿ ವತಿಯಿಂದ ಕಾರ್ಯಾರಂಭಿಸಲು ಜಿಲ್ಲಾಡಳಿತ ಎಲ್ಲಾ ನೆರವು ಒದಗಿಸಲಿದೆ. ಇದರಿಂದ ಸಾರ್ವಜನಿಕರಿಗೆ ಅದರಲ್ಲೂ ವಿದ್ಯಾರ್ಥಿ ಯುವಜನರಲ್ಲಿ ಸೈನಿಕರ ಬಗ್ಗೆ ಅರಿವು ಹಾಗೂ ಕುತೂಹಲ ಮೂಡಿಸಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಜಿ ಸೈನಿಕರ ಕುಂದುಕೊರತೆಗಳನ್ನು ಆಲಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸೈನಿಕರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸೈನ್ಯ ಸೇರುವ ಬಗ್ಗೆ ಕುತೂಹಲ ಮೂಡಿಸಲು ಹಾಗೂ ದೇಶಪ್ರೇಮದ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಸೈನಿಕರು ಅಥವಾ ಮಾಜಿ ಸೈನಿಕರೊಂದಿಗೆ ವಿದ್ಯಾರ್ಥಿಗಳು ಸಂವಾದ ಮಾಡಲು ಕಾರ್ಯಕ್ರಮಗಳನ್ನು ರೂಪಿಸುವಂತೆ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 96 ಮಾಜಿ ಸೈನಿಕರು ಹಾಗೂ 17 ಮಾಜಿ ಸೈನಿಕರ ವಿಧವೆಯರು ನೋಂದಣಿ ಮಾಡಿದ್ದಾರೆ. 2018-19ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ 151ವಿದ್ಯಾರ್ಥಿಗಳಿಗೆ 3.68ಲಕ್ಷ ರೂ. ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು 4.92ಲಕ್ಷ ರೂ. ಸಹಾಯ ಸೌಲಭ್ಯ ಒದಗಿಸಲಾಗಿದೆ ಎಂದು ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಚಂದ್ರಪ್ಪ ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಸಂಗಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮಾಜಿ ಸೈನಿಕರ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

error: Content is protected !!