ಶಿವಮೊಗ್ಗ : ಅಕ್ಟೋಬರ್ 26 : : ಶಿಕ್ಷಣ ವಂಚಿತ ಮಕ್ಕಳು ಕಾರ್ಖಾನೆ, ಗ್ಯಾರೇಜು, ಹೋಟೆಲ್ ಮತ್ತಿತರ ಕೆಲಸ-ಕಾರ್ಯಗಳಲ್ಲಿ ಸಕ್ರಿಯವಾಗಿ ತಮ್ಮ ಅಮೂಲ್ಯವಾದ ಬಾಲ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಬೇಸರ ಸಂಗತಿ. ಈ ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿ, ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಲ್ಲಿ ಯತ್ನಿಸದಿದ್ದರೆ ಈ ಮಕ್ಕಳು ಭವಿಷ್ಯದಲ್ಲಿ ಸಮಾಜಘಾತಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಆತಂಕವಿದೆ ಅಲ್ಲದೇ ಸಮಾಜಕ್ಕೆ ಕಂಟಕಪ್ರಾಯರಾಗುವ ಸಂಭವವಿದೆ ಎಂದು ಜಿಲ್ಲಾಧಿಕಾರಿ ಡಾ||ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ದಾಖಲಾಗಿರುವ ಬಾಲಕಾರ್ಮಿಕರ ಸಂಖ್ಯೆ ಅತೀವ ಕಡಿಮೆಯಾಗಿದೆ. ಇನ್ನಷ್ಟು ಬಾಲಕಾರ್ಮಿಕರನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ. ಜಿಲ್ಲಾಪಂಚಾಯಿತಿಯ ಸಹಕಾರ ಪಡೆದು, ಪಂಚಾಯಿತಿ ಮಟ್ಟದಲ್ಲಿಯೂ ಬಾಲಕಾರ್ಮಿಕರನ್ನು ಗುರುತಿಸಿ, ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಸುಮಾ ಅವರಿಗೆ ಸೂಚಿಸಿದರು.
ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಗ್ರಾಮಾಂತರ ಪ್ರದೇಶಗಳಲ್ಲಿ ಹೊರರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಕಾಲದಲ್ಲಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳೂ ಕೂಡ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಅವರು ಅನ್ಯ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಹಾಗೂ ಅವರ ಪೋಷಕರ ಮನವೊಲಿಸಿ, ಶಾಲೆಗೆ ಕರೆತರುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಿ, ಅವರ ಚಟುವಟಿಕೆಗಳ ಬಗ್ಗೆ ಗಮನಹರಿಸುವಂತೆ ಸೂಚಿಸಿದರು.
ಬಾಲ್ಯವಿವಾಹ, ಸಾಗಾಣಿಕೆ, ಬಾಲಕಾರ್ಮಿಕರ ಬಗ್ಗೆಯೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಮಕ್ಕಳ ಸಭೆಗಳಲ್ಲಿ ಸಮಾಲೋಚನೆ ನಡೆಸುವಂತೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗೋಡೆ ಬರಹಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.
ಬಾಲಕಾರ್ಮಿಕರನ್ನು ಗುರುತಿಸಲು ಹಾಗೂ ಬಾಲಕರನ್ನು ಬಳಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ವಹಿಸಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲು ಕೂಡಲೇ ತರಬೇತಿ ಕಾರ್ಯಾಗಾರವನ್ನು ಆಯೋಜಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.
ಇತ್ತೀಚೆಗೆ ಭದ್ರಾವತಿ ತಾಲೂಕಿನಲ್ಲಿ ಗುರುತಿಸಲಾದ 02ಪ್ರಕರಣಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಹಾಗೂ ಈ ಹಿಂದೆ ತನಿಖಾ ಹಂತದಲ್ಲಿರುವ 09 ಮೊಕದ್ದಮೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಉಚಿತ ಸಹಾಯವಾಣಿ 1098ಗೆ ಕರೆ ಮಾಡಿ ದೂರು ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಸುಮಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್, ಬಾಲಕಾರ್ಮಿಕ ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.