ಶಿವಮೊಗ್ಗ,ಜೂ.21: ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಲು ಜೂ. 28ರಂದು ಶಿವಮೊಗ್ಗದಲ್ಲಿ ಜನಸ್ಪಂದನ ಮತ್ತು 29 ರಂದು ಕೆಡಿಪಿ ಸಭೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಇಂತಹುದೇ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರ ಅನೇಕ ಕುಂದುಕೊರತೆಗಳನ್ನು ನೀಗಿಸಲಾಗಿತ್ತು. ಈ ಬಾರಿ ಜನಸ್ಪಂದ ನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.
ಕಳೆದ 7 ದಶಕಗಳಿಂದ ನನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದ್ದು, ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯವಾದಿಗಳ ತಂಡವನ್ನು ರಚಿಸಲಾಗುವುದು. ಅರಣ್ಯಭೂಮಿಗೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಮಟ್ಟದಲ್ಲಿ 13 ಸಭೆ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಏಳೆಂಟು ಸಭೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಮೂಲಕ ಬಗರ್ಹುಕುಂ ಮೊದಲಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮುಂದುವರೆದಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳನ್ನು ಅವರವರ ಹಂತದಲ್ಲಿಯೇ ಬಗೆಹರಿಸಿಕೊಳ್ಳಲು ಮುಖ್ಯಮಂತ್ರಿಗಳು ಸಂಬಂಧಿಸಿದ ಸಚಿವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ ಅವರು, ಅರಣ್ಯಕ್ಕೆ ಸಂಬಂಧಿಸಿದ ಕಾನೂನು ಸಡಿಲವಾಗಬೇಕು. ಇಲ್ಲವಾದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಷ್ಟ ಎಂದು ಅವರು ಅಭಿಪ್ರಾಯಪಟ್ಟರು.
ಕಳೆದ ಎರಡು ಮೂರು ತಿಂಗಳಿಂದ ಚುನಾವಣೆ ಹಿನ್ನಲೆಯಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಈಗ ಚುನಾವಣೆ ಮುಗಿದಿದೆ, ಬಜೆಟ್ ನಲ್ಲಿ ಹಣ ಕೂಡ ಮಂಜೂರಾಗಿದೆ. ಇನ್ನು ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಪ್ರಮುಖರಾದ ಆರ್. ಪ್ರಸನ್ನಕುಮಾರ್, ಚಂದ್ರಭೂಪಾಲ್, ಜಿ.ಡಿ. ಮಂಜುನಾಥ್, ಕಲಗೋಡು ರತ್ನಾಕರ್, ಸಿದ್ದಪ್ಪ, ಚಿನ್ನಪ್ಪ, ಶಿವಾನಂದ್, ಚಂದ್ರಶೇಖರ್ ಎಸ್.ಟಿ. ಇದ್ದರು.
ರಾಜ್ಯದಲ್ಲಿ ಸುಮಾರು 1900 ಅನಧಿಕೃತ ಶಾಲೆಗಳನ್ನು ಸರ್ಕಾರ ಗುರುತಿಸಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ನೀಟ್ ಗೆ ಸಂಬಂಧಿಸಿದಂತೆ ರಾಜ್ಯದ ಆಯ್ದ ಕಾಲೇಜುಗಳಲ್ಲಿ ಸರ್ಕಾರದ ವತಿಯಿಂದ ಉಚಿತವಾಗಿ ನೀಟ್ ತರಬೇತಿ ನೀಡುವ ಕ್ರಮ ಕೈಗೊಳ್ಳಲಾಗುವುದು. ಬಡ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗುವುದು. ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಈಗಿರುವ ನಿರ್ಬಂಧವನ್ನು ಸಡಿಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಇತ್ತೀಚೆಗೆ ನಿಧನರಾದ ಬಿಜೆಪಿ ಹಿರಿಯ ನಾಯಕ ಎಂ.ಬಿ. ಭಾನುಪ್ರಕಾಶ್ ಅವರು ಒಳ್ಳೆಯ ಗುಣ ಸ್ವಭಾವದವರಾಗಿದ್ದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಭಾನುಪ್ರಕಾಶ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿಯೇ ಚುನಾವಣೆ ಗೆದ್ದಿದ್ದರು. ನಾನು ಕೂಡ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲೇ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದೆ. ಅವರು ಉತ್ತಮ ಸಹಕಾರಿ ಮನೋಭಾವ ಹೊಂದಿದವರಾಗಿದ್ದರು. ಅವರ ನಿಧನ ನನಗೆ ಬಹಳ ದುಃಖ ತಂದಿದೆ. ಇಂದು ಸಂಜೆ ಮೃತರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳುವುದು ನನ್ನ ಕರ್ತವ್ಯ ಎಂದರು.