ಶಿವಮೊಗ್ಗ : ಜೂನ್ 21 : ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಯಾವುದೇ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಮನ್ವಯತೆ ಅತ್ಯಗತ್ಯ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಪರಸ್ಪರ ಪರಿಚಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಇಲಾಖೆಗಳ ಪರಿಚಯಾತ್ಮಕ ಮಾಹಿತಿ ಪಡೆದು, ಮಾತನಾಡುತ್ತಿದ್ದರು. ಪ್ರಸ್ತುತ ಸಂದರ್ಭದಲ್ಲಿ ಆಡಳಿತ ವ್ಯವಸ್ಥೆ ಬಗ್ಗೆ ಜನರ ಅಭಿಪ್ರಾಯ ಅಷ್ಟಾಗಿ ಉತ್ತಮವಾಗಿಲ್ಲ. ಅಧಿಕಾರಿಗಳ, ಸಂಬಂಧಿತ ಇಲಾಖೆಗಳ ನಡುವೆ ಸಮನ್ವಯತೆ ಹಾಗೂ ಅಧಿಕಾರಿಗಳ ಸಂಘಟಿತ ಪ್ರಯತ್ನದಿಂದ ಯೋಜನೆಗಳ ವ್ಯವಸ್ಥಿತ ಅನುಷ್ಟಾನದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಬಹುದಾಗಿದೆ ಎಂದರು.
ತಾಲೂಕು ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಂದ ದೂರುಗಳು ಬಾರದಂತೆ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವಂತೆ ಹಾಗೂ ನಾಗರೀಕ ಜನಜೀವನಕ್ಕೆ ಅಡಚಣೆ ಉಂಟಾಗದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯರಿತು, ತಮಗಿರುವ ಕಾನೂನಿನ ಮಿತಿಯೊಳಗೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ನಗರ ಪ್ರದೇಶದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದ್ದಾಗಿರುವಂತೆ ಹಾಗೂ ತ್ವರಿತವಾಗಿ ಪೂರ್ಣಗೊಳಿಸುವಂತೆ ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ ಅವರು, ಮಳೆಗಾಲ ಈಗಷ್ಟೆ ಆರಂಭಗೊಂಡಿದ್ದು, ಕೈಗೊಂಡ ಕಾಮಗಾರಿಗಳು ಅಪೂರ್ಣವಾಗಿದ್ದರಿಂದಾಗಿ ವಾಹನ ಸಂಚಾರಕ್ಕೆ ತೀವ್ರತರಹದ ಅಡಚಣೆ ಉಂಟಾಗಿರುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕೂಡಲೇ ಈಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಶೇ.96ರಷ್ಟು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳನ್ನು ಮುಂದಿನ ಕೆಲವು ತಿಂಗಳೊಳಗಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೇಂದ್ರ ಸರ್ಕಾರವು ಹೊಸದಾಗಿ ಅನುದಾನ ಬಿಡುಗಡೆ ಮಾಡದಿರುವ ಷರತ್ತಿನೊಂದಿಗೆ ಮುಂದಿನ ಜೂನ್ ಮಾಹೆಯವರೆಗೆ ಕೈಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಿದೆ. – ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಎಸ್.ವಟಾರೆ.
ನಗರದ ಕೆಲವು ಸ್ಥಳಗಳಲ್ಲಿ ಅಭಿವೃದ್ಧಿಪಡಿಸಿರುವ ರಾಜಾಕಾಲುವೆಗಳನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಉತ್ತಮವಾಗಿ ನಿರ್ಮಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಹಾಗೂ ಮಳೆ ನೀರಿನಿಂದ ಹಾನಿಗೊಳಗಾಗಬಹುದಾದ ಪ್ರದೇಶಗಳ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದೆಲ್ಲೆಡೆ ನಿರ್ಮಿಸಲಾಗಿರುವ ಚರಂಡಿ ಮೇಲ್ಬಾಗ ಮುಚ್ಚಲಾಗಿದ್ದು, ಅದನ್ನು ತೆರೆಯಲು ಸಾಧ್ಯವಾಗದಂತೆ ಅಳವಡಿಸಲಾಗಿದೆ. ಮಳೆಗಾಲದ ನೀರು ತುಂಬಿ ಚರಂಡಿ ನೀರು ರಸ್ತೆಯ ಮೇಲೆ ಹರಿದು ಜನಜೀವನ ಅಸ್ತವ್ಯಸ್ತಗೊಳ್ಳುವ ಸಂಭವವಿರುವುದರಿಂದ ಈ ಚರಂಡಿಗಳನ್ನು ಕೂಡಲೆ ಸ್ವಚ್ಚಗೊಳಿಸಲು ಕ್ರಮ ಕೈಗೊಳ್ಳುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಶಾಲೆಗಳ ಸ್ವಚ್ಚತೆ ನಿರ್ವಹಣೆಯಲ್ಲಿಯೂ ನ್ಯೂನತೆಗಳಿದ್ದು, ಅಲ್ಲಿನ ನೀರು, ನೈರ್ಮಲ್ಯದ ಕುರಿತು ಪಾಲಿಕೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಬೀದಿಬದಿಯ ತಳ್ಳುಗಾಡಿ ವ್ಯಾಪಾರಿಗಳಿಗೆ ಪಾಲಿಕೆಯಿಂದ ಸೌಲಭ್ಯ ಒದಗಿಸುತ್ತಿರುವುದು ಸಂತಸದ ಸಂಗತಿ. ಆದರೆ, ಈ ವ್ಯಾಪಾರಿಗಳು ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ತಳ್ಳುಗಾಡಿಗಳು ಮುಂದೆಮುಂದೆ ಸಾಗಿ ವ್ಯಾಪಾರ ವಹಿವಾಟು ನಡೆಸುವಂತೆ ಸಲಹೆ ನೀಡಬೇಕಲ್ಲದೇ ಅವರಿಗೆ ಶಾಶ್ವತವಾಗಿ ವ್ಯವಹರಿಸಲು ಇರಬಹುದಾದ ಪರ್ಯಾಯ ಕ್ರಮಗಳ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ನಗರದ ಹಲವು ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳು ನಿರ್ಮಿಸುವ ಅಗತ್ಯವಿದ್ದು, ನಿವೇಶನ ಒದಗಿಸಿದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಗೆ ಬೇಡಿಕೆ ಸಲ್ಲಿಸಬಹುದಾಗಿದೆ. ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಮತ್ತು ಸಂಚಾರ ನಿಯಮಗಳ ಪಾಲನೆಯಲ್ಲಿ ಪೊಲೀಸ್ ಇಲಾಖೆ ಕ್ರಿಯಾಶೀಲರಾಗಬೇಕು. ನಗರದಲ್ಲಿ ಬಹುಮುಖ್ಯವಾಗಿ ಆಗಾಗ್ಗೆ ಕಂಡುಬರುವ ಸೈಬರ್ ಕ್ರೈಂ ಗಳ ಬಗ್ಗೆಯೂ ಗಮನಹರಿಸಬೇಕು ಎಂದವರು ನುಡಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

error: Content is protected !!