ಶಿವಮೊಗ್ಗ, ಮೇ.13: ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದನ್ನು ಮನಗಂಡು ಸರ್ಕಾರ ನರೇಗಾ ಯೋಜನೆಯನ್ನು ಪುನಾರಂಭಿಸಲು ನಿರ್ಧರಿಸಿದೆ. ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನ ಕುರಿತಾಗಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಇದರ ಪ್ರಕಾರ ಒಂದು ಸ್ಥಳದಲ್ಲಿ ಗರಿಷ್ಟ 40ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಕೂಲಿ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ತಿಳಿಸಲಾಗಿದೆ. ಕೂಲಿ ಮೊತ್ತವನ್ನು ಹೆಚ್ಚಿಸಲಾಗಿದ್ದು ಒಟ್ಟು 299 ರೂ. ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಮಾಹಿತಿ: ಕರೋನಾ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಗರಿಷ್ಟ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 216 ಐಸಿಯು ಬೆಡ್ ಹಾಗೂ 944 ಆಕ್ಸಿಜನ್ ಬೆಡ್‍ಗಳಿವೆ. ಸರ್ಕಾರಿ ಆಸ್ಪತ್ರೆಯಲ್ಲಿ 78 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 32 ವೆಂಟಿಲೇಟರ್‍ಗಳಿವೆ. ಪ್ರಸ್ತುತ ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್‍ಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 2,67,060 ಡೋಸ್ ಕೋವಿಶೀಲ್ಡ್ ನೀಡಲಾಗಿದ್ದು, 2540 ಡೋಸ್ ಉಳಿಕೆ ಇದೆ. ಕೋವಾಕ್ಸಿನ್ 20460 ಡೋಸ್ ನೀಡಲಾಗಿದ್ದು, ಉಳಿಕೆ ಇರುವುದಿಲ್ಲ. 2,41,578 ಮಂದಿಗೆ ಮೊದಲ ಡೋಸ್ ನೀಡಲಾಗಿದ್ದು, 54358 ಮಂದಿಗೆ ಎರಡನೇ ಡೋಸ್ ಪೂರ್ಣಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 552 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 383 ರೆಮಿಡಿಸ್ವಿರ್ ಇಂಜೆಕ್ಷನ್ ಲಭ್ಯವಿದೆ. 88 ಸಕ್ರಿಯ ಕಂಟೈನ್‍ಮೆಂಟ್ ಝೋನ್‍ಗಳಿವೆ. ಮಾಸ್ಕ್ ಧರಿಸದ 9207 ಪ್ರಕರಣಗಳಲ್ಲಿ 12,76,850 ರೂ. ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

error: Content is protected !!