ಶಿವಮೊಗ್ಗ, ಮಾರ್ಚ್ 28 : ವಿಧಾನಸಭೆ ಚುನಾವಣೆಯ ಕಾರ್ಯ ಹಾಗೂ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆ 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ. ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯ ನಿವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.