ಶಿವಮೊಗ್ಗ, ಮೇ.19 : ಶಿವಮೊಗ್ಗ ನಗರದಲ್ಲಿ ಅತಿವಷ್ಟಿಯಿಂದ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ಹಾನಿಗೀಡಾದವರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನೆ ಹಾನಿ ಕುರಿತು ಕಂದಾಯ ಸಚಿವರೊಂದಿಗಿನ ವಿಡಿಯೋ ಕಾನ್ಪರೆನ್ಸ್ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ 24ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸುರಿದಿರುವ ನಿರಂತರ ಮಳೆಯಿಂದಾಗಿ 17ಮನೆಗಳು ಭಾಗಶಃ ಕುಸಿದಿವೆ. 1085 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿ ಸಂಭವಿಸಿದೆ. 123 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಬೆಳೆ ಹಾನಿ ಕುರಿತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಸಮೀಕ್ಷೆಯನ್ನು ತಕ್ಷಣ ಕೈಗೊಂಡು ಒಂದೆರಡು ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಬೇಕು. ವರದಿ ಆಧಾರದಲ್ಲಿ ಬೆಳೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಮಳೆಯಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಮಾನವ ಪ್ರಾಣ ಹಾನಿ ಅಥವಾ ಜಾನುವಾರುಗಳ ಪ್ರಾಣಹಾನಿ ಸಂಭವಿಸಿರುವುದಿಲ್ಲ. ಪ್ರಾಣ ಹಾನಿ ಸಂಭವಿಸಿದ ತಕ್ಷಣ ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ 24ಗಂಟೆಯ ಒಳಗಾಗಿ ಪರಿಹಾರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕು. ಮನೆಗಳಿಗೆ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ ಆದಷ್ಟು ಬೇಗನೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಪರಿಶೀಲನೆ: ಶಿವಮೊಗ್ಗ ನಗರದಲ್ಲಿ ನಿರಂತರ ಮಳೆಯಿಂದಾಗಿ ನೀರು ನುಗ್ಗಿರುವ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅವರು ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲವು ಕಡೆಗಳಲ್ಲಿ ಚರಂಡಿ ಕಟ್ಟಿಕೊಂಡು, ನೀರು ತುಂಬಿ ಕೃತಕ ನೆರೆ ಉಂಟಾಗಿರುವ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಲು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಳಜಿ ಕೇಂದ್ರ: ಶಿವಮೊಗ್ಗ ನಗರದಲ್ಲಿ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ 250ಮಂದಿಗೆ ಕಾಳಜಿ ಕೇಂದ್ರಗಳಲ್ಲಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ನೀರು ನುಗ್ಗಬಹುದಾದ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲು ಸೂಚನೆ ನೀಡಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!