ಶಿವಮೊಗ್ಗ, ಮಾರ್ಚ್ 16 : ಜಿಲ್ಲೆಯಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಅಪಘಾತ ವಲಯಗಳಿಗೆ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಭಿಯಂತರರೊಂದಿಗೆ ಖುದ್ದು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ಕೈಗೊಳ್ಳಬಹುದಾದ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ದೀಪಕ್ ಅವರಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಅಫಘಾತದ ಪ್ರಮಾಣ ಹಾಗೂ ಮರಣದ ಸಂಖ್ಯೆಯನ್ನು ಶೇ.10ರಷ್ಟು ನಿಯಂತ್ರಿಸುವಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಂಡು ಅದನ್ನು ಕರಾರುವಾಕ್ಕಾಗಿ ಅನುಷ್ಠಾನಗೊಳಿಸಬೇಕಾದ ಅಗತ್ಯವಿದೆ ಎಂದವರು ನುಡಿದರು.
ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಕುರಿತು ಕೈಗೊಳ್ಳಬಹುದಾದ ಯೋಜನೆಗಳ ಬಗ್ಗೆ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗಳ ಬೆಳವಣಿಗೆಗಳನ್ನು ಅವಲೋಕಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಅಗತ್ಯವಿರುವೆಡೆಗಳಲ್ಲಿ, ವರ್ತುಲಗಳಲ್ಲಿ ಸೂಚನಾಫಲಕಗಳನ್ನು ಹಾಗೂ ಹಂಪ್ಸ್‍ಗಳನ್ನು ಅಳವಡಿಸಿ, ಸುರಕ್ಷತಾಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ಕಾಲೇಜು ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಲು ಹಾಗೂ ವಿಚಾರಸಂಕಿರಣಗಳನ್ನು ಆಯೋಜಿಸಿ ಮಾಹಿತಿ ನೀಡುವಂತೆ ಸೂಚಿಸಲಾಗಿತ್ತು. ಈ ಕುರಿತು ಮುಂದಿನ ಒಂದು ವಾರದೊಳಗಾಗಿ ಸಮಗ್ರ ವರದಿಯನ್ನು ನೀಡುವಂತೆ ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ವಿವಿಧ ರಸ್ತೆ, ವರ್ತುಲಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳ ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯ ಶಿಫಾರಸ್ಸಿನಂತೆ ಈಗಾಗಲೇ ಅನೇಕ ಸ್ಥಳಗಳಲ್ಲಿ ಸಿಸಿ.ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ ಇನ್ನೂ 118ಸ್ಥಳಗಳಲ್ಲಿ ಕ್ಯಾಮರಾ ಅಳವಡಿಸುವುದು ಸೂಕ್ತವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ಆ ಪ್ರಸ್ತಾವನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‍ಸಿಟಿ ಯೋಜನೆಯ ಅಧಿಕಾರಿಗಳಿಗೆ ರವಾನಿಸಿ, ಕ್ಯಾಮರಾ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರ ರಸ್ತೆ(ಬಾಳೆಬರೆ ಘಾಟ್) ಮಾಸ್ತಿಕಟ್ಟೆ ಸಮೀಪ. 42.75ನಲ್ಲಿರುವ ಚಂಡಿಕಾ ದೇವಸ್ಥಾನದ ಕೆಳಗಡೆ ನಿರಂತರ ಅಫಘಾತಗಳು ನಡೆಯುತ್ತಿವೆ. ಇವುಗಳನ್ನು ನಿಯಂತ್ರಿಸಲು ರಸ್ತೆ ಅಗಲೀಕರಣ ಮಾಡಿ, ತಡೆಗೋಡೆ ನಿರ್ಮಿಸುವ ಅಗತ್ಯವಿರುವುದನ್ನು ಗುರುತಿಸಲಾಗಿದೆ. ಈ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೊಳಪಡುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದವರು ನುಡಿದರು.
ಶಿವಮೊಗ್ಗ ನಗರದ ವಿವಿಧ ರಸ್ತೆಗಳಲ್ಲಿ ವಾಹನ ನಿಲುಗಡೆ ಹಾಗೂ ವೇಗಮಿತಿ ಮತ್ತು ಏಕಮುಖ ಸಂಚಾರದ ಕುರಿತು ಸ್ಥಳ ನಿಗಧಿಪಡಿಸಿ, ಆದೇಶಕ್ಕೆ ಅನುಮೋದನೆ ನೀಡಿದ ಅವರು, ನಗರದ ನೆಹರೂ ರಸ್ತೆ, ಎ.ಎ.ಸರ್ಕಲ್, ಗೋಪಿ ಸರ್ಕಲ್‍ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆಗೆ ಸ್ಥಳ ನಿಗಧಿಪಡಿಸಿ, ಆದೇಶಕ್ಕೆ ಅನುಮೋದನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿಕ್ಷಣ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.