ಶಿವಮೊಗ್ಗ, ಮೇ.12 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಅನುದಾನ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಎಚ್ಚರಿಕೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಯಕ್ರಮ ಅನುಷ್ಟಾನದ ಪರಿಶೀಲನೆ ನಡೆಸಿದರು.

ಕೆಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯೋಜನೆಯಡಿ ಶೇ.100ರಷ್ಟು ಪ್ರಗತಿ ಸಾಧಿಸಲಾಗಿಲ್ಲ. ಅಂತಹ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಬೇಕು. ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳಿಗೆ ಬ್ಯಾಂಕ್‍ನಿಂದ ಹಣಕಾಸಿನ ಸೌಲಭ್ಯ ದೊರೆಯುವುದು ವಿಳಂಬವಾಗಿರುವ ಕುರಿತು ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಪ್ರಸ್ತುತ ಹಣಕಾಸು ವರ್ಷದ ಆರಂಭದಲ್ಲಿಯೇ ಕ್ರಿಯಾ ಯೋಜನೆ ಸಿದ್ಧಪಡಿಸುವುದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವುದು, ಟೆಂಡರ್ ಪ್ರಕ್ರಿಯೆಗೆ ಸಿದ್ಧತೆಗಳನ್ನು ಕೈಗೊಳ್ಳಬೇಕು. ಅನುದಾನ ಬಿಡುಗಡೆಯಾದ ತಕ್ಷಣ ಅನುಷ್ಟಾನ ಕಾರ್ಯವನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಎಸ್‍ಸಿಪಿ/ಟಿಎಸ್‍ಪಿ ಅನುದಾನ ಲೋಪವಾಗಲು ಅವಕಾಶ ಕಲ್ಪಿಸಬಾರದು. ಅನುದಾನ ಲೋಪ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಾಗಿರಿಸುವ ಅನುದಾನವನ್ನು ಬೇರೆ ಯೋಜನೆಗಳಿಗೆ, ಕಾಮಗಾರಿಗಳಿಗೆ ಬಳಕೆ ಮಾಡದಂತೆ ಎಚ್ಚರಿಕೆ ವಹಿಸಬೇಕು. ಯೋಜನೆಯ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಖಾತ್ರಿ ವಹಿಸಬೇಕು. ಎಲ್ಲಾ ಇಲಾಖೆಗಳು ಈ ಕುರಿತು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜು, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್, ಎಲ್ಲಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!