ಶಿವಮೊಗ್ಗ, ಮಾರ್ಚ್ 17 (ಕರ್ನಾಟಕ ವಾರ್ತೆ) : ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್‍ಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆಗಳನ್ನು ನಿವಾರಿಸುವಲ್ಲಿ ಹಾಗೂ ಮ್ಯಾನ್ಯುಯಲ್ ಸ್ಕಾವೆಂಜರ್ ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಏರ್ಪಡಿಸಲಾಗಿದ್ದ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿತ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯ ವರದಿಯಂತೆ ಪೌರಕಾರ್ಮಿಕರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಶೇ.40ರಷ್ಟು ಇದೆ. ಆರ್ಥಿಕ ಸಮಸ್ಯೆಯಿಂದಾಗಿ ಅನಾರೋಗ್ಯದ ಸಂದರ್ಭದಲ್ಲಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ನರಳುವಂತಾಗಿದೆ. ಇಂತಹ ವಾಸ್ತವ ಸಂಗತಿಗಳನ್ನು ಸರ್ಕಾರದ ಗಮನಸೆಳೆದು ಅಂತಹ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ಕಾರ್ಡ್ ವಿತರಿಸಲು ಜಿಲ್ಲಾ ಆರೋಗ್ಯ ಇಲಾಖೆಗೆ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಪೌರಕಾರ್ಮಿಕರು ರೂ.5ಲಕ್ಷಗಳವರೆಗಿನ ಚಿಕಿತ್ಸೆಯನ್ನು ಪಡೆಯಲು ಅನುಕೂಲವಾಗಲಿದೆ ಎಂದರು.
ನಗರದ 35ವಾರ್ಡುಗಳಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಾಣ ಮಾಡಲು ಸೂಚಿಸಲಾಗಿದ್ದು, ಈಗಾಗಲೇ 18ವಾರ್ಡುಗಳಲ್ಲಿ ವಿಶ್ರಾಂತಿಗೃಹ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ವಿಶ್ರಾಂತಿಗೃಹಕ್ಕೆ ರೂ.10ಲಕ್ಷ ಗಳ ಅಂದಾಜು ವೆಚ್ಚವಾಗಲಿದೆ. ಜೂನ್ ಮಾಸಾಂತ್ಯಕ್ಕೆ ಈ ಕಟ್ಟಡಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಪೌರಕಾರ್ಮಿಕರಿಗೆ ಬೆಳಗಿನ ಉಪಹಾರಕ್ಕಾಗಿ ದಿನಂಪ್ರತಿ ರೂ.20/-ಗಳನ್ನು ಮಾತ್ರ ವ್ಯಯ ಮಾಡಲಾಗುತ್ತಿದೆ. ಈ ಹಣದಲ್ಲಿ ಗುಣಮಟ್ಟದ ಉಪಹಾರ ಲಭ್ಯವಾಗದಿರುವ ಬಗ್ಗೆ ತಿಳಿದಿದ್ದು, ಅದನ್ನು ರೂ.70/-ಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಅಲ್ಲಿಯವರೆಗೆ ಸ್ಥಳೀಯ ಸಂಸ್ಥೆಗಳು ಈ ಹೆಚ್ಚುವರಿ ಹಣವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆಯೂ ಸ್ಥಳೀಯ ಸಂಸ್ಥೆಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಕುರಿತು ಶೀಘ್ರದಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದರು.
ಅನೇಕ ವರ್ಷಗಳಿಂದ ಯು.ಜಿ.ಡಿ. ಕಾರ್ಯನಿರ್ವಹಿಸುತ್ತಿರುವ 434ಕಾರ್ಮಿಕರನ್ನು ಖಾಯಂಗೊಳಿಸುವ ಸಂಬಂಧ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮೊದಲ ಹಂತದ ಸಮಾಲೋಚನೆ ನಡೆಸಲಾಗಿದೆ. ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 9000ಪೌರ ಸೇವಾ ಕಾರ್ಮಿಕರಿಗೂ ಖಾಯಂಗೊಳಿಸುವ ಪ್ರಯತ್ನ ಮುಂದುವರೆದಿದೆ. ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.
ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಸಮವಸ್ತ್ರ ಏಕರೀತಿಯಲ್ಲಿರುವಂತೆ ಕ್ರಮಕೈಗೊಳ್ಳಲು ಉದ್ದೇಶಿಸಲಾಗಿದೆ. ಒರಿಸ್ಸಾ, ಕೇರಳ ಹಾಗೂ ಸಿಂಗಾಪುರ ಸೇರಿದಂತೆ ದೇಶ ವಿದೇಶಗಳಲ್ಲಿ ಪೌರಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಅಧ್ಯಯನ ವರದಿ ಪಡೆದು, ಅಳವಡಿಸಿಕೊಳ್ಳಲು ಸರ್ಕಾರದ ಅನುಮತಿ ದೊರೆತಿದೆ ಎಂದರು.
ಮ್ಯಾನ್ಯುಯಲ್ ಸ್ಕಾವೆಂಜರ್ಸ್‍ಗಳ ಸರ್ವೇ ಕಾರ್ಯ ರಾಜ್ಯದ 3-4ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ನೋಂದಾಯಿಸಿಕೊಂಡಿರುವ 5080ಮ್ಯಾನ್ಯುಯಲ್ ಸ್ಕಾವೆಂಜರ್ಸ್‍ಗಳ ಪೈಕಿ 3000ಮಂದಿಯ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಆನ್‍ಲೈನ್ ಮೂಲಕ ಸಲ್ಲಿಸಲಾಗಿದೆ. ಅಂತಹ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರವು ಆರಂಭದ ಹಂತವಾಗಿ ರೂ.40,000/-ಗಳ ಆರ್ಥಿಕ ನೆರವು ಒದಗಿಸಲಿದೆ. ಅಂತೆಯೇ ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಮನೆ, ಅವಲಂಬಿತರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ ತರಬೇತಿ ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಅಂತೆಯೇ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಪೌರಸೇವಾ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅಧಿಕಾರಿಗಳು ಹಾಗೂ ಕಾರ್ಮಿಕರನ್ನೊಳಗೊಂಡಂತೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.