ಮಕ್ಕಳ ಮಾರಾಟ ಸೇರಿದಂತೆ ಮಕ್ಕಳ ಅಕ್ರಮ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ನಿರಂತರ ನಿಗಾ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ 4ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು, ಮಾರಾಟ ಪ್ರಕರಣಗಳು ಸೇರಿದಂತೆ ಎಲ್ಲಾ ರೀತಿಯ ಶೋಷಣೆಗಳನ್ನು ತಡೆಗಟ್ಟುವುದು ಎಲ್ಲಾ ಇಲಾಖೆಗಳ ಹಾಗೂ ಸಾರ್ವಜನಿಕರ ಜವಾಬ್ದಾರಿಯಾಗಿದೆ. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ಮಕ್ಕಳ ಸಹಾಯವಾಣಿ ದೂರವಾಣಿ ಸಂಖ್ಯೆ 1098 ಕರೆ ಮಾಡಿ ಸಾರ್ವಜನಿಕರು ಮಕ್ಕಳ ಮೇಲಿನ ಯಾವುದೇ ರೀತಿಯ ದೌರ್ಜನ್ಯಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡಬಹುದಾಗಿದೆ. ಈ ಸಂಖ್ಯೆಯನ್ನು ಜಿಲ್ಲೆಯಾದ್ಯಂತ ಹೆಚ್ಚು ಪ್ರಚುರಪಡಿಸಬೇಕು. ಎಲ್ಲಾ ಶಾಲೆಗಳ ಗೋಡೆಗಳ ಮೇಲೆ ಸ್ಪಷ್ಟವಾಗಿ ಕಾಣುವಂತೆ ಈ ಸಂಖ್ಯೆಯನ್ನು ಬರೆಯಬೇಕು ಎಂದು ಅವರು ಸೂಚನೆ ನೀಡಿದರು.
ಸಹಾಯವಾಣಿ: ಮಕ್ಕಳ ಸಹಾಯವಾಣಿಗೆ ಕಳೆದ ಐದು ತಿಂಗಳಲ್ಲಿ ಒಟ್ಟು 337 ಕರೆಗಳು ಬಂದಿವೆ. ಇದರಲ್ಲಿ 41ಬಾಲ್ಯ ವಿವಾಹ, 17 ಲೈಂಗಿಕ ದೌರ್ಜನ್ಯ, 23ಬಾಲ ಕಾರ್ಮಿಕ, 70 ಮಾನಸಿಕ ಹಾಗೂ ದೈಹಿಕ ಹಿಂಸೆ, 74 ಶಾಲೆಯಲ್ಲಿ ಗೈರು ಹಾಜರಾಗಿರುವ ಕುರಿತು ಕರೆಗಳನ್ನು ಸ್ವೀಕರಿಸಲಾಗಿದೆ. ಪ್ರತಿಯೊಂದು ಕರೆಗಳನ್ನು ತಕ್ಷಣ ಪರಿಶೀಲಿಸಿ ಕ್ರಮ ಜರುಗಿಸಲಾಗಿದೆ. ಪೊಲೀಸರ ಸಹಕಾರದೊಂದಿಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು.
ಮಕ್ಕಳ ಪಾಲನಾ ಸಂಸ್ಥೆಗಳ ಪರಿಶೀಲನೆ: ಜಿಲ್ಲೆಯಲ್ಲಿ 37 ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಿದ್ದು, ಪ್ರಸ್ತುತ 174ಮಕ್ಕಳು ಆಶ್ರಯ ಪಡೆದಿದ್ದಾರೆ. ಕೋವಿಡ್ ಅವಧಿಯಲ್ಲಿ 1186ಮಕ್ಕಳನ್ನು ಅವರ ಪಾಲಕರ ವಶಕ್ಕೆ ಕಳುಹಿಸಲಾಗಿದೆ. ಈ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ ಮೂಲಭೂತ ಸೌಕರ್ಯಗಳು, ನೀಡುತ್ತಿರುವ ಸೌಲಭ್ಯಗಳ ಕುರಿತು ಆಗಾಗ್ಗೆ ತಪಾಸಣೆ ನಡೆಸಬೇಕು ಎಂದು ಅವರು ಹೇಳಿದರು.
ಬಾಲ್ಯ ವಿವಾಹ ಪ್ರಕರಣಗಳು: ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ 2ಬಾಲ್ಯ ವಿವಾಹ ಪ್ರಕರಣಗಳು ನಡೆದಿವೆ. ಇನ್ನುಳಿದ 18ಪ್ರಕರಣಗಳಲ್ಲಿ ಬಾಲ್ಯವಿವಾಹ ತಡೆಯಲಾಗಿದೆ. ಬಾಲ್ಯ ವಿವಾಹ ತಡೆದ 3ಮಕ್ಕಳಿಗೆ ತಾತ್ಕಾಲಿಕ ಆಶ್ರಯ ನೀಡಿ ಮಕ್ಕಳ ಕಲ್ಯಾಣ ಸಮಿತಿ ಆದೇಶದ ಬಳಿಕ ಪೋಷಕರ ವಶಕ್ಕೆ ನೀಡಲಾಗಿದೆ. ಇನ್ನುಳಿದ ಪ್ರಕರಣಗಳಲ್ಲಿ ಆಪ್ತ ಸಮಾಲೋಚನೆ ನಡೆಸಿದ ಬಳಿಕ ಪೋಷಕರ ವಶಕ್ಕೆ ನೀಡಲಾಗಿದೆ. ಈ ಎಲ್ಲಾ ಪ್ರಕರಣಗಳನ್ನು ನಿರಂತರವಾಗಿ ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಂಗೂಬಾಯಿ, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶಂಕ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.