ಶಿವಮೊಗ್ಗ. ಮೇ 03 : ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿ.ಯು.ಸಿ., ಪಿ.ಸಿ.ಎಂ.ಬಿ. ಹಾಗೂ ಪಿ.ಸಿ.ಎಂ.ಸಿ. ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪಿ.ಸಿ.ಎಂ.ಬಿ. ಹಾಗೂ ಪಿ.ಸಿ.ಎಂ.ಸಿ., ಸಂಯೋಗಗಳಿಗೆ ತಲಾ 40ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದ್ದು, ಶೇ.50ರಷ್ಟು ಬಾಲಕರು ಹಾಗೂ ಶೇ.50ರಷ್ಟು ಬಾಲಕಿಯರಿಗೆ ಮೀಸಲಿರಿಸಲಾಗಿದೆ. ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.,ಯಲ್ಲಿ ಗಳಿಸಿದ ಗರಿಷ್ಟ ಅಂಕಗಳ ಆಧಾರದ ಮೇಲೆ ಹಾಗೂ ಮೀಸಲಾತಿಯನ್ವಯ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಟ್ ಹಾಗೂ ಜೆ.ಇ.ಇ. ಪರೀಕ್ಷೆಗಳಿಗೆ ಉಚಿತ ತರಬೇತಿ ಸೌಲಭ್ಯ ಹಾಗೂ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಇತ್ಯಾದಿ ಸೌಲಭ್ಯ ನೀಡಲಾಗುವುದು.
ಪ್ರವೇಶ ಪಡೆಯಲಿಚ್ಚಿಸುವ ಅಭ್ಯರ್ಥಿಯ ಪೋಷಕರ ವಾರ್ಷಿಕ ವರಮಾನ ಪ್ರವರ್ಗ-1 ಹಾಗೂ ಪರಿಶಿಷ್ಟ ಜಾತಿ/ಪಂಗಡಕ್ಕೆ ರೂ.2.50ಲಕ್ಷ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ರೂ. 1.00ಲಕ್ಷ ಗಳಾಗಿರುತ್ತವೆ.
ಆಸಕ್ತರು ನಿಗಧಿತ ನಮೂನೆಯ ಅರ್ಜಿ ಹಾಗೂ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು ಗಾಜನೂರು ಹಾಗೂ ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಮೇ 08 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-234200ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.