ಶಿವಮೊಗ್ಗ, ಆ.05 : ಸಕ್ಕಿಂಗ್ ಯಂತ್ರಗಳನ್ನು ಬಳಸದೆ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಮೂಲಕ ಶೌಚಗುಂಡಿಗಳನ್ನು ಸ್ವಚ್ಚಗೊಳಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದರು.
ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಕ್ಕಿಂಗ್ ಯಂತ್ರಗಳು ಲಭ್ಯವಿದ್ದು, ಅದನ್ನೇ ಕಡ್ಡಾಯವಾಗಿ ಬಳಸಬೇಕು. ಖಾಸಗಿ ವ್ಯಕ್ತಿಗಳು ಸಹ ಸ್ಥಳೀಯ ಸಂಸ್ಥೆಗಳಿಂದ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಲಭ್ಯವಿರುವ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಬೇಕು. ಪ್ರಾಯೋಗಿಕವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂತಹ ಉಪಕರಣಗಳನ್ನು ಬಳಸಿ ಪ್ರತಿನಿತ್ಯದ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಬಳಿಕ ಹಂತ ಹಂತವಾಗಿ ಇತರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಅದನ್ನು ಅನುಷ್ಟಾನಗೊಳಿಸಬಹುದಾಗಿದೆ ಎಂದು ಅವರು ಹೇಳಿದರು.
ಹೊರ ಸಂಪನ್ಮೂಲ ಹಾಗೂ ಗುತ್ತಿಗೆ ನೇಮಕಾತಿಯಡಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ನಿಯಮಾನುಸಾರ ಕನಿಷ್ಟ ವೇತನ ಪಾವತಿಯನ್ನು ಖಾತ್ರಿಪಡಿಸಬೇಕು. ಈಗಾಗಲೇ ಕೆಲವು ಇಲಾಖೆಗಳಲ್ಲಿ ಹೊರಸಂಪನ್ಮೂಲ ಅಡಿ ಸೇವೆ ಒದಗಿಸಿರುವ ಗುತ್ತಿಗೆ ಸಂಸ್ಥೆಯವರು ಕನಿಷ್ಟ ವೇತನ ಪಾವತಿಸದಿರುವ ಪ್ರಕರಣಗನ್ನು ದಾಖಲಿಸಲಾಗಿದೆ. ಇದೇ ರೀತಿ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಕಡ್ಡಾಯವಾಗಿ ನೀಡುವ ಕುರಿತು ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಹಿಂದಿನ ಸಮೀಕ್ಷೆ ಸಂದರ್ಭದಲ್ಲಿ ಗುರುತಿಸಲಾಗಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಪಡಿತರ ಚೀಟಿ, ಗುರುತಿನ ಚೀಟಿ ಮತ್ತು ಒಂದು ಬಾರಿ 40ಸಾವಿರ ರೂ. ಆರ್ಥಿಕ ಸಹಾಯ ಒದಗಿಸಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುಟುಂಬದ 4 ವಿದ್ಯಾರ್ಥಿಗಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರವೇಶ ಕಲ್ಪಿಸಲಾಗಿದೆ. ನಿವೇಶನ ಹೊಂದಿರುವ 14 ಫಲಾನುಭವಿಗಳಿಗೆ ವಸತಿ ಯೋಜನೆಯಡಿ ಮನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಅವರು ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಸೂಡಾ ಆಯುಕ್ತ ಕರಿಭೀಮಣ್ಣನವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.