ಶಿವಮೊಗ್ಗ, ಸೆ.17 : ಶಿವಮೊಗ್ಗ ನಗರದಲ್ಲಿ ಒಳಚರಂಡಿ ನಿರ್ಮಾಣ, ಸರ್ಕಾರಿ ಶಾಲೆಗಳ ದುರಸ್ತಿ, ಉದ್ಯಾನವನಗಳ ಅಭಿವೃದ್ಧಿ, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಸೇರಿದಂತೆ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಟಾನಗೊಳಿಸಿ ಕಾಲಮಿತಿಯ ಒಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಶಾಲೆಗಳ ದುರಸ್ತಿಗೆ ಆದ್ಯತೆ: ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ 86ಸರ್ಕಾರಿ ಶಾಲೆಗಳನ್ನು ದುರಸ್ತಿ ಮಾಡಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅನುದಾನ ಲಭ್ಯವಿದ್ದು, ಇನ್ನು ಒಂದು ತಿಂಗಳ ಒಳಗಾಗಿ ಕಾಮಗಾರಿಗಳನ್ನು ಆರಂಭಿಸಬೇಕು. ಶಾಲೆಗಳ ದುರಸ್ತಿಗೆ 8ಕೋಟಿ ರೂ. ಹಾಗೂ 47 ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ 4.84 ಕೋಟಿ ರೂ. ಮಂಜೂರಾತಿ ನೀಡಲಾಗಿದೆ. ಒಟ್ಟು 5.36ಕೋಟಿ ರೂ. ಲಭ್ಯವಿದ್ದು, ಇನ್ನುಳಿದ ಅನುದಾನವನ್ನು ಲೋಕೋಪಯೋಗಿ ಇಲಾಖೆ ಮೂಲಕ ಬಿಡುಗಡೆಗೊಳಿಸಲಾಗುವುದು. ಶಾಲೆಗಳ ದುರಸ್ತಿ ಮತ್ತು ಶೌಚಾಲಯ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಂಡು ನವೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಎಲ್ಲಾ ವಾರ್ಡ್‍ಗಳಲ್ಲಿ ಉದ್ಯಾನ ನಿರ್ಮಾಣ: ಪಾಲಿಕೆ ವ್ಯಾಪ್ತಿಯ ಎಲ್ಲಾ 35ವಾರ್ಡ್‍ಗಳಲ್ಲಿ ಉದ್ಯಾನವನ ನಿರ್ಮಾಣಕ್ಕಾಗಿ 15ದಿನಗಳ ಒಳಗಾಗಿ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಸಚಿವರು ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿರುವ ಒಟ್ಟು 392ಪಾರ್ಕ್‍ಗಳ ಪೈಕಿ ಪ್ರಸ್ತುತ ಸಾಲಿನಲ್ಲಿ 100ಪಾರ್ಕ್‍ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. 24ಪಾರ್ಕ್‍ಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, 8ಪೂರ್ಣಗೊಂಡಿದೆ. ಡಿಸೆಂಬರ್ ಒಳಗಾಗಿ ಈ ಎಲ್ಲಾ ಪಾರ್ಕ್‍ಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳಬೇಕು. ಇದನ್ನು ಹೊರತುಪಡಿಸಿ ಪ್ರತಿ ವಾರ್ಡ್‍ನಲ್ಲಿ ಉದ್ಯಾನ ಅಭಿವೃದ್ಧಿಗೆ ಸ್ಥಳ ಗುರುತಿಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ಅವರು ತಿಳಿಸಿದರು.
ಕುಡಿಯುವ ನೀರಿಗೆ ತೊಂದರೆಯಾಗಬಾರದು: ಬೊಮ್ಮನಹಳ್ಳಿ, ಮಲಗೊಪ್ಪ ಸೇರಿದಂತೆ ಕೆಲವು ಭಾಗಗಳಲ್ಲಿ ಈಗಲೂ ಕುಡಿಯುವ ನೀರಿಗೆ ತೊಂದರೆಯಿದೆ. ಅಗತ್ಯ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ನಗರದ ವಿವಿಧ ಭಾಗಗಳಲ್ಲಿ ಈಗಾಗಲೇ ನಿರ್ಮಾಣ ಪೂರ್ಣಗೊಂಡಿರುವ ನೀರಿನ ಟ್ಯಾಂಕಿಗಳನ್ನು ಆದಷ್ಟು ಬೇಗನೇ ಕಾರ್ಯಾರಂಭ ಮಾಡಬೇಕು. ಮುಂದಿನ ಮೂರು ತಿಂಗಳ ಒಳಗಾಗಿ ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಅವರು ತಾಕೀತು ಮಾಡಿದರು.
ಯುಜಿಡಿ ಸಂಪರ್ಕ: ನಗರದಲ್ಲಿ ಪ್ರಥಮ ಹಂತದಲ್ಲಿ ಹೊಳೆಯ ಈ ಬದಿಯಲ್ಲಿ ಯುಜಿಡಿ ಸಂಪರ್ಕ ಕಲ್ಪಿಸುವ ಕಾಮಗಾರಿಯನ್ನು ತ್ವರಿತಗೊಳಿಸಿ ಡಿಸೆಂಬರ್ ಅಂತ್ಯದ ಒಳಗಾಗಿ ಎಲ್ಲಾ 56 ಸಾವಿರ ಮನೆಗಳಿಗೆ ಯುಜಿಡಿ ಸಂಪರ್ಕ ಕಲ್ಪಿಸಬೇಕು. ಈಗಾಗಲೇ ಸುಮಾರು 40ಸಾವಿರ ಮನೆಗಳಿಗೆ ಸಂಪರ್ಕ ಕಲ್ಪಿಸುವ ಕಾಮಗಾರಿ ಮಾತ್ರ ಬಾಕಿಯಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಮನೆಯಿಂದ ಯುಜಿಡಿಗೆ ಉತ್ತಮ ಗುಣಮಟ್ಟದ ಪೈಪ್‍ಗಳ ಮೂಲಕ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರಿಗೆ ಸೂಚಿಸಬೇಕು ಎಂದರು.
ನೆರೆ ಪರಿಹಾರ ಪರಿಶೀಲಿಸಿ: ನಗರದಲ್ಲಿ ನೆರೆಯಲ್ಲಿ ತೊಂದರೆ ಅನುಭವಿಸಿದ 5065 ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ ತಲಾ 10ಸಾವಿರ ರೂ. ನೀಡಲಾಗಿದೆ. ಮಹಾನಗರ ಪಾಲಿಕೆಯಿಂದ ಇನ್ನೂ 1600 ಕುಟುಂಬಗಳ ಪಟ್ಟಿ ಬಂದಿದ್ದು, ಪೂರಕ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಈ ಕುರಿತು ಸ್ಥಳ ಪರಿಶೀಲನೆ ನಡೆಸಿ ಅರ್ಹರಿಗೆ ಪರಿಹಾರ ಒದಗಿಸುವಂತೆ ಸಚಿವರು ತಿಳಿಸಿದರು.
ಕ್ರಮಕ್ಕೆ ಸೂಚನೆ: ವಿರುಪಿನಕೊಪ್ಪದಲ್ಲಿ ಸಿಎ ಸೈಟ್‍ನಲ್ಲಿ ಹಲವರು ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿರುವ ಬಗ್ಗೆ ದೂರುಗಳ ಬಂದಿದ್ದು, ಅದನ್ನು ಪರಿಶೀಲಿಸಿ ತಕ್ಷಣ ತೆರವುಗೊಳಿಸಬೇಕು. ಇತ್ತೀಚಿನ ಮಳೆಯಿಂದಾಗಿ ತುಂಗಾ ಚಾನೆಲ್‍ನಲ್ಲಿ ಹಲವು ಕಡೆ ಹಾನಿ ಉಂಟಾಗಿದ್ದು, ಇದನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಹಾಗೂ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ಉಪ ಮೇಯರ್ ಚನ್ನಬಸಪ್ಪ, ಎಲ್ಲಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

error: Content is protected !!