ಶಿವಮೊಗ್ಗ : ಜೂನ್ 19 : ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಅವರು ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.
ಮಲೆನಾಡಿನಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಚೆಕ್‍ಡ್ಯಾಂಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆ ಇದೆ ಎಂದರು.
ರಿಪ್ಪನ್‍ಪೇಟೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ, ಕಸ ವಿಲೇವಾರಿ ವ್ಯವಸ್ಥೆ, ಕರ ಸಂಗ್ರಹಣೆ ಕುರಿತು ಆಗಿರುವ ಪ್ರಗತಿ ಪರಿಶೀಲಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕೇವಲ ರಸ್ತೆಗಳ ನಿರ್ಮಾಣಕ್ಕೆ, ಇತ್ಯಾದಿಗಳಿಗೆ ಮಾತ್ರ ಗಮನಹರಿಸದೇ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಚೆಕ್‍ಡ್ಯಾಂಗಳನ್ನು ನಿರ್ಮಿಸಲು ಆದ್ಯತೆ ನೀಡಬೇಕು. ಕೂಲಿ ಮತ್ತು ವೆಚ್ಚ ಸರಿದೂಗಿಸಲು ಅಗತ್ಯ ನಾಲೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬಹುದಾಗಿದೆ ಎಂದರು.
ರಿಪ್ಪನ್‍ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಕಸ ವಿಂಗಡಣಾ ಘಟಕಕ್ಕೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 400 ಮನೆಗಳಿದ್ದು, ಕಸವನ್ನು ಸಂಗ್ರಹಿಸಲಾಗುತ್ತಿದೆ. ಆದರೆ, ಎಲ್ಲರೂ ಒಣಕಸ ಮತ್ತು ಹಸಿಕಸ ವಿಂಗಡಿಸಿ ನೀಡದಿರುವುದು ಗಮನಕ್ಕೆ ಬಂದಿದೆ. ಕಸ ವಿಂಗಡಣಾ ಘಟಕದಲ್ಲಿ ಕೂಲಿ ಕಾರ್ಮಿಕರು ಕಸವನ್ನು ಪುನಃ ವಿಂಗಡಿಸುವ ಪರಿಸ್ಥಿತಿ ಇದೆ. ಪ್ರತಿಯೊಬ್ಬರೂ ಒಣ ಮತ್ತು ಹಸಿ ಕಸ ವಿಂಗಡಿಸಿ ನೀಡುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದವರು ನುಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ ಸಂಗ್ರಹಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದ ಅವರು, 16ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ಗವಟೂರು ಚೆಕ್‍ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಪ್ಪೆಮನೆ ಗ್ರಾಮದಲ್ಲಿ ನಿರ್ಮಿಸಿರುವ ಕಾಲುಸಂಕ ವೀಕ್ಷಿಸಿದರು. ಚೆಕ್ ಡ್ಯಾಂ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಈಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಜನರು ಎಚ್ಚೆತ್ತುಕೊಳ್ಳಬೇಕು ಎಂದರು.
ಈ ಎಲ್ಲಾ ಭೇಟಿಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಧಿಕಾರಿ-ಸಿಬ್ಬಂಧಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.