News Next

ಶಿವಮೊಗ್ಗ, ಜು.31: ಕರೋನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪ್ರತಿವರ್ಷದಂತೆ ಈ ಬಾರಿಯೂ ಡಿಎಆರ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಈ ಬಾರಿ ಶಾಲಾ ಮಕ್ಕಳು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸೀಮಿತ ಸಂಖ್ಯೆಯಲ್ಲಿ ಮಾತ್ರ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿರಬೇಕು. ಸಮಾರಂಭದ ಕೊನೆಯಲ್ಲಿ ಶಾಲಾ ಮಕ್ಕಳ ಬದಲಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಬೇಕು. ಸಮಾರಂಭದಲ್ಲಿ ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಆಯ್ದ ಕರೋನಾ ವಾರಿಯರ್ಸ್‍ಗಳನ್ನು ಗೌರವಿಸಲಾಗುವುದು. 
ಈ ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸಲು ವ್ಯವಸ್ಥೆ ಮಾಡಬಹುದಾಗಿದೆ. ಇನ್ನುಳಿದಂತೆ ಪ್ರತಿ ವರ್ಷದಂತೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಯೋಜಿಸಬೇಕು. ಎಲ್ಲಾ ಪ್ರಮುಖ ವೃತ್ತಗಳನ್ನು ಹಾಗೂ ಸರ್ಕಾರಿ ಕಚೇರಿಗಳನ್ನು ವಿದ್ಯುದ್ದೀಪಗಳಿಂದ ಆಲಂಕರಿಸಬೇಕು ಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!