ಶಿವಮೊಗ್ಗ, ನ.17: ಜಿಲ್ಲೆಯಲ್ಲಿ ಕರೋನಾ ಪ್ರಕರಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ಜನರು ಮೈಮರೆಯದೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕರೋನಾವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕರೋನಾ ಕುರಿತು ಜನಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕರೋನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆಯನ್ನು ಕಂಡು ಹಿಡಿಯುವ ತನಕ ಮುಂಜಾಗರೂಕತೆಯೇ ಇದಕ್ಕೆ ಮದ್ದಾಗಿದೆ. 60ವರ್ಷಕ್ಕಿಂತ ಮೇಲ್ಪಟ್ಟವರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜನಜಂಗುಳಿಗೆ ಅವಕಾಶ ನೀಡದೆ ಪ್ರತಿಯೊಬ್ಬರೂ ಕನಿಷ್ಟ ಅಂತರವನ್ನು ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಸಮರ್ಪಕವಾದ ಬಳಕೆ ಮತ್ತು ಕೈಗಳನ್ನು ಆಗಾಗ್ಗೆ ಸೋಪಿನಿಂದ ತೊಳೆಯುವ ಮೂಲಕ ಕರೋನಾ ಬೇರೆಯವರಿಗೆ ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಸಾರ್ವಜನಿಕರ ಸಹಕಾರದಿಂದಾಗಿ ಕರೋನಾ ನಿಯಂತ್ರಣಕ್ಕೆ ಬಂದಿದೆ. ಪ್ರಸ್ತುತ 169ಮಂದಿ ಮಾತ್ರ ಕರೊನಾ ಸೊಂಕಿಗೆ ಒಳಗಾಗಿ ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ಜಿಲ್ಲೆಯ ಆಯ್ದ 180ಗ್ರಾಮಗಳಲ್ಲಿ ವಿಶಾಲವಾದ ಎಲ್ಇಡಿ ಪರದೆಯನ್ನು ಹೊಂದಿರುವ ಎರಡು ವಾಹನಗಳ ಮೂಲಕ ಕರೋನಾ ಕುರಿತು ಜನಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಶಫಿ ಸಾದುದ್ದೀನ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.